ಮುಂಬೈ : ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗಳ ಪತಿ ಹಾಗೂ ದಲಿತ ಚಿಂತಕ ಆನಂದ್ ತೇಲ್ತುಂಬ್ಡೆಗೆ 1 ಲಕ್ಷ ರೂ. ಶ್ಯೂರಿಟಿ ಮೇಲೆ ಬಾಂಬೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ವಿಶೇಷ ಎನ್ ಐಎ ನ್ಯಾಯಾಲಯ ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರ ವಿರುದ್ಧ ಆನಂದ್ ತೇಲ್ತುಂಬ್ಡೆ ಕಳೆದ ವರ್ಷ ಹೈಕೋರ್ಟ್ ಮೊರೆ ಹೋಗಿದ್ದರು.
ಈ ಪ್ರಕರಣವು 2017ರ ಡಿಸೆಂಬರ್ 31ರಂದು ಪುಣೆಯ ಶನಿವಾರವಾಡದಲ್ಲಿ ನಡೆದ ಎಲ್ಗಾರ್ ಪರಿಷದ್ ಸಮಾವೇಶದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದೆ. ಇದು ಮರುದಿನ ನಗರದ ಹೊರವಲಯದಲ್ಲಿರುವ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿಂಸಾಚಾರದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವು ಗಾಯಗೊಂಡಿದ್ದಾರೆ. ಹನ್ನೆರಡಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಶಿಕ್ಷಣತಜ್ಞರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.










