ಬೆಂಗಳೂರು : ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ನಾಳಿನ ಕರ್ನಾಟಕ ಬಂದ್ ರದ್ದಾಗಿದೆ.
ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಖಂಡಿಸಿ ನಾಳೆ ಬೆಳಗ್ಗೆ 9 ರಿಂದ 11 ಗಂಟೆವರೆಗೆ ಬಂದ್ ಗೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದರು. ಆದರೆ ಪಿಯುಸಿ ಪರೀಕ್ಷೆ ಹಿನ್ನೆಲೆ ಬಂದ್ ರದ್ದು ಮಾಡಲು ನಿರ್ಧರಿಸಲಾಗಿದೆ.
ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿ.ಕೆ ಹರಿಪ್ರಸಾದ್ ಸೇರಿದಂತೆ ಇನ್ನಿತರ ನಾಯಕರು ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ್ದು, ಪಿಯುಸಿ ಪರೀಕ್ಷೆ ಇರುವುದರಿಂದ ಬಂದ್ ವಾಪಸ್ ಪಡೆದುಕೊಂಡಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಪ್ರಕರಣವನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್, ಮಾರ್ಚ್ 9ರಂದು ರಾಜ್ಯಾದ್ಯಂತ 2 ಗಂಟೆ ಬಂದ್ ಗೆ ಕರ್ನಾಟಕ ಕಾಂಗ್ರೆಸ್ ಕರೆ ಕೊಟ್ಟಿತ್ತು. ಕಾಂಗ್ರೆಸ್ ಬಂದ್ ಗೆ ವಿರೋಧಗಳು ವ್ಯಕ್ತವಾಗಿದ್ದವು. ಇನ್ನು ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು.










