ಮಂಗಳೂರು : ಮನೆಗೆ ನುಗ್ಗಿ ದುಷ್ಕರ್ಮಿಗಳು ಒಂದೇ ಕುಟುಂಬದ ಇಬ್ಬರನ್ನು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಅಜಲಾಡಿ ಎಂಬಲ್ಲಿ ನಡೆದಿದೆ. ಕೊಗ್ಗು ಸಾಹೇಬ್(62) ಹಾಗೂ ಮೊಮ್ಮಗಳು ಸಮೀಹ(14) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಕೊಗ್ಗು ಸಾಹೇಬರ ಪತ್ನಿ ಖತೀಜ(55) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ತಡರಾತ್ರಿ ದುಷ್ಕರ್ಮಿಗಳ ತಂಡವೊಂದು ಏಕಾಏಕಿ ಕೊಗ್ಗು ಸಾಹೇಬರ ಮನೆಗೆ ನುಗ್ಗಿ ಮನೆಯಲ್ಲಿದ್ದ ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬಳಿಕ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.










