ಬೆಂಗಳೂರು : ದೇಶಕ್ಕೆ ಸ್ವಾತಂತ್ರ್ಯ ಬಂದು ಆಗಸ್ಟ್ 15ಕ್ಕೆ 75 ವರ್ಷ ಆಗುತ್ತಿದೆ. ಈ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ. ಅಮೃತ ಮಹೋತ್ಸವ ಹಿನ್ನೆಲೆ ಹರ್ ಘರ್ ತಿರಂಗಾ ಅಭಿಯಾನ ನಡೆಸಲು ಕೇಂದ್ರ ಸರ್ಕಾರ ಸೂಚಿಸಿದೆ. ಇದರ ಬೆನ್ನಲ್ಲೇ ರಾಜ್ಯದ ಪದವಿ, ಸ್ನಾತಕೋತ್ತರ ಮತ್ತು ವಿಶ್ವ ವಿದ್ಯಾನಿಲಯಗಳಲ್ಲಿ ಕಡ್ಡಾಯವಾಗಿ ತ್ರಿವರ್ಣ ಧ್ವಜ ಹಾರಿಸಲು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಇದರ ಜೊತೆಗೆ ಶಿಕ್ಷಣ ಇಲಾಖೆಯೂ ಹೊಸ ಆದೇಶವನ್ನು ಹೊರಡಿಸಿದೆ. ಆಗಸ್ಟ್ 11 ರಿಂದ ಆಗಸ್ಟ್ 17ರವರೆಗೆ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯುಸಿ ಕಾಲೇಜುಗಳು, ಮದರಸಾಗಳ ಮೇಲೂ ಕಡ್ಡಾಯವಾಗಿ ತ್ರಿವರ್ಣಧ್ವಜ ಹಾರಿಸಲೇಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.










