ಕೋಲ್ಕತ್ತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ವಕ್ತಾರ ಕೌಸ್ತವ್ ಬಾಗ್ಚಿ ಅವರನ್ನು ಬಂಧಿಸಲಾಗಿದೆ.
ಕೋಲ್ಕತ್ತಾದ ಬುರ್ಟೊಲ್ಲಾ ಪೊಲೀಸ್ ಠಾಣೆಯ ಪೊಲೀಸರ ತಂಡ, ಇಂದು ಮುಂಜಾನೆ ಪಶ್ಚಿಮ ಬಂಗಾಳದ ರ‍್ರಾಕ್‌ಪೋರ್‌ನಲ್ಲಿರುವ ಬಾಗ್ಚಿ ಅವರ ನಿವಾಸಕ್ಕೆ ದಾಳಿ ನಡೆಸಿ ಅವರನ್ನು ಬಂಧಿಸಿದೆ.
ಮುಖ್ಯಮಂತ್ರಿ ಮಮತಾ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಶುಕ್ರವಾರ ಬಾಗ್ಚಿ ವಿರುದ್ಧ ಬುರ್ಟೊಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ಬಾಗ್ಚಿ ಅವರನ್ನು ಬುರ್ಟೊಲ್ಲಾ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು.
ಇತ್ತೀಚೆಗೆ ನಡೆದ ಸಾಗರ್ದಿಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಂಡಿದ್ದು, ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರ ಮೇಲೆ ವೈಯಕ್ತಿಕ ದಾಳಿ ನಡೆಸಲಾಗಿತ್ತು. ಇದಾದ ಬಳಿಕ ತೃಣಮೂಲ ಕಾಂಗ್ರೆಸ್ ನ ಮುಖ್ಯಸ್ಥೆ ಹಾಗೂ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಬಾಗ್ಚಿ ಟೀಕಿಸಿದ್ದರು.










