ಹರ್ದೋಯಿ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಉತ್ತರಪ್ರದೇಶದ ಹರ್ದೋಯಿ ಜಿಲ್ಲೆಯ ಬಿಲಹೌರ್ – ಕತ್ರಾ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ರಾಜಾರಾಂ, ಹೊಶಿಯಾರ್, ಮುಖೇಶ್, ಅವರ ಮಗ ಬಲ್ಲು (4) ಮತ್ತು ಮನೋಜ್ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಪಚ್‍ದೇವ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಬರಕಾಂತ್ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಮೃತದೇಹಗಳನ್ನು ಹೊರತೆಗೆದು ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.










