ಮರಕ್ಕೆ ಕಾರು ಡಿಕ್ಕಿ – ದಂಪತಿ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರಿಗೆ ಗಂಭೀರ ಗಾಯ…

68
firstsuddi

ಚಿಕ್ಕಮಗಳೂರು : ಮರಕ್ಕೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, ಮಕ್ಕಳಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ಶ್ರೀನಿವಾಸ್, ಶ್ವೇತಾ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ನಿಶ್ಚಿತಾರ್ಥ ಕಾರ್ಯಕ್ರಮವೊಂದಕ್ಕೆ ಭದ್ರಾವತಿಗೆ ಕುಟುಂಬ ಸಮೇತ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮುಂಭಾಗದಲ್ಲಿ ಕುಳಿತಿದ್ದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿಂಭಾಗದಲ್ಲಿ ಇಬ್ಬರು ಮಕ್ಕಳು ಕುಳಿತಿದ್ದು, ಅವರಿಗೂ ಗಂಭೀರ ಗಾಯಗಳಾಗಿವೆ.

ಗಾಯಗೊಂಡ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಾರು ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.