ಮಳೆಯಿಂದಾಗಿ ಆಸ್ತಿಪಾಸ್ತಿ ನಷ್ಟ – ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಒತ್ತಾಯ…

81
firstsuddi

ಚಿಕ್ಕಮಗಳೂರು : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯವನ್ನು ಚುರುಕುಗೊಳಿಸುವಂತೆ ಬಹುಜನ ಸಮಾಜಪಕ್ಷ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರನ್ನು ಇಂದು ಭೇಟಿ ಮಾಡಿದ ಪಕ್ಷದ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಬಹಳಷ್ಟು ನಷ್ಟ ಸಂಭವಿಸಿದೆ, ಎಲ್ಲಾ ತಾಲ್ಲೂಕುಗಳಲ್ಲೂ ಅನೇಕ ಮನೆಗಳು ನೆಲಸಮವಾಗಿವೆ, ಬಹಳಷ್ಟು ಮನೆಗಳಿಗೆ ಹಾನಿಯಾಗಿದೆ ಎಂದರು.

ತರೀಕೆರೆ ತಾಲ್ಲೂಕಿನ ವಡ್ಡರಗುಪ್ಪದಲ್ಲಿ, ಶೃಂಗೇರಿ ತಾಲ್ಲೂಕಿನ ಗುಲಗಂಜಿಯಲ್ಲಿ, ಕಳಸಾ, ಕೊಪ್ಪ, ಎನ್.ಆರ್.ಪುರ, ಅಜ್ಜಂಪುರ ತಾಲ್ಲೂಕುಗಳಲ್ಲೂ ಮನೆಗಳಿಗೆ, ರಸ್ತೆ, ಸೇತುವೆಗಳಿಗೆ ಹಾನಿಯಾಗಿದೆ, ವಿದ್ಯುತ್ ಕಂಬಗಳು ಉರುಳಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ, ಭಾರಿ ಮಳೆಯಿಂದಾಗಿ ಬೆಳೆ ನೀರು ಪಾಲಾಗಿ ಬಡ ರೈತರು ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದಾರೆ ಎಂದು ತಿಳಿಸಿದರು.

ಮಳೆಯಿಂದಾಗಿ ಮನೆ ಕಳೆದು ಕೊಂಡವರಿಗೆ, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಆದಷ್ಟು ಶೀಘ್ರವಾಗಿ ಸೂಕ್ತ ಪರಿಹಾರ ನೀಡಬೇಕು, ಮಳೆಯಿಂದಾಗಿ ಹಾನಿಗೊಳಗಾಗಿರುವ ರಸ್ತೆ, ಸೇತುವೆಗಳ ಪುನರ್ ನಿರ್ಮಾಣ ಕಾರ್ಯವನ್ನು ತ್ವರಿತಗತಿಯಲ್ಲಿ ಮಾಡಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕಿನ ತೊಗರಿಹಂಕಲ್‍ನಲ್ಲಿ ಹಳ್ಳದಲ್ಲಿ ಕೊಚ್ಚಿಹೋದ ಬಾಲಕಿ ಸುಪ್ರೀತ ಅವರ ಶೋಧ ಕಾರ್ಯವನ್ನು ಚುರುಕುಗೊಳಿಸಬೇಕು ಆಕೆಯ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಬಿಎಸ್‍ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ತಾಲ್ಲೂಕು ಅಧ್ಯಕ್ಷ ಹರೀಶ್ ಮಿತ್ರ, ಕಛೇರಿ ಕಾರ್ಯದರ್ಶಿ ಕೆ.ಆರ್.ಗಂಗಾಧರ್, ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ, ಉಪಾಧ್ಯಕ್ಷೆ ಕೆ.ಎಸ್.ಮಂಜುಳಾ, ರಾಧಾ, ನವಕರ್ನಾಟಕ ಯುವಶಕ್ತಿ ವೇದಿಕೆಯ ಜಿಲ್ಲಾಧ್ಯಕ್ಷ ಸಿ.ಆರ್.ರಘು, ನವೀನ್ ಹಾಜರಿದ್ದರು.