ಮಹಾರಾಷ್ಟ್ರದ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: ಓರ್ವ ಸಾವು.

32

ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಇಂದು ಭೀಕರ ಸ್ಫೋಟ ಸಂಭವಿಸಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿನ ಸ್ಫೋಟ ಸಂಭವಿಸಿದ ಪರಿಣಾಮ ಘಟಕದ ಮೇಲ್ಛಾವಣಿ ಕುಸಿದು 13 ರಿಂದ 14 ಕಾರ್ಮಿಕರು ಸಿಲುಕಿಕೊಂಡಿದ್ದಾರೆ. 10 ಉದ್ಯೋಗಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ರಕ್ಷಣಾ ಪ್ರಯತ್ನಗಳು ನಡೆಯುತ್ತಿವೆ. ಸ್ಫೋಟದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ವರದಿ ನೀಡಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಘಟನಾ ಸ್ಥಳದಿಂದ 5 ಮಂದಿಯನ್ನು ರಕ್ಷಿಸಲಾಗಿದೆ ಮತ್ತು ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳದಲ್ಲಿದ್ದಾರೆ, ನಾಗ್ಪುರದಿಂದ ರಾಜ್ಯ ವಿಪತ್ತು ತಂಡ ಸ್ಥಳಕ್ಕಾಗಮಿಸುತ್ತಿದೆ ಎಂದು ತಿಳಿಸಿದ್ದಾರೆ. ಕಾರ್ಖಾನೆ ಆವರಣದಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೋಲ್ಟೆ ತಿಳಿಸಿದ್ದಾರೆ. ಮೇಲ್ಛಾವಣಿ ಕುಸಿದಿದ್ದು, ಅವಶೇಷಗಳನ್ನು ತೆಗೆಯಲು ಅಗೆಯುವ ಯಂತ್ರವನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.