ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ.

39

ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಚಾಮರಾಜಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ ಅವರ ಪಾರ್ಥಿವ ಶರೀರವನ್ನು ಹಾವೇರಿ ಜಿಲ್ಲೆ ಹಾನಗಲ್‍ಗೆ ರವಾನಿಸಲಾಗುತ್ತದೆ. ಎನ್‍ಸಿಜೆಸಿ ಮಹಾವಿದ್ಯಾಲಯದ ಅವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಬಳಿಕ ಹುಟ್ಟೂರು ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಬಿಇ ಮೆಕ್ಯಾನಿಕಲ್ ಪದವೀಧರರಾಗಿದ್ದ ಮನೋಹರ್ ತಹಶೀಲ್ದಾರ್ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. 1978ರಲ್ಲಿ ಮೊದಲ ಬಾರಿಗೆ ಹಾನಗಲ್ ವಿಧಾನಸಭೆ ಕ್ಷೇತ್ರದಿಂದ ಗೆದ್ದಿದ್ದರು. ಬಳಿಕ 1989, 1999, 2013 ಸೇರಿ ಗೆಲುವು ಸಾಧಿಸಿದ್ದರು. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಿಧಾನಸಭೆಯ ಉಪಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿ ಕೆಲಸ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ನಂತರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು.