ಬೆಂಗಳೂರು: ಫೆ.17ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. ಶಿವರಾತ್ರಿಯ ನಂತರ ಸಭೆ ನಡೆಯುವ ಸಾಧ್ಯತೆ ಇದೆ ಎಂದು ವಿಶ್ವಾಸಾರ್ಹ ಮೂಲಗಳು ದೃಢಪಡಿಸಿದ್ದು, ಫೆ.27ಕ್ಕೆ ಹೊಸ ದಿನಾಂಕ ನಿಗದಿಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅದೇ ರೀತಿ ಇದೇ ಫೆಬ್ರವರಿ 16 ರಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಚಾಮರಾಜನಗರದ ಡಾ.ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶವನ್ನೂ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಜೊತೆಗೆ ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮವೂ ಮುಂದೂಡಲ್ಪಟ್ಟಿದೆ. ಮುಖ್ಯಮಂತ್ರಿಗಳ ಕಾಲಿನ ಗಾಯ ಮತ್ತು ಉದ್ಘಾಟನೆಗಾಗಿ ಯೋಜಿಸಲಾದ ಹಲವು ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲದ ಕಾರಣ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.










