ಮೂಡಿಗೆರೆ : ಬಿಳಗುಳ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಶೂ ಮತ್ತು ಸಾಕ್ಸ್ ವಿತರಣೆ…

453
firstsuddi

ಮೂಡಿಗೆರೆ : ತಾಲ್ಲೂಕಿನ ಬಿಳಗುಳ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಶೂ ಮತ್ತು ಸಾಕ್ಸ್ ವಿತರಣೆ ಮಾಡಲಾಯಿತು.
ಸರ್ಕಾರಿ ಶಾಲೆಯ ಮಕ್ಕಳು ಇತರೆ ಖಾಸಗಿ ಶಾಲೆಗಳ ಮಕ್ಕಳಂತೆ ಓದಿಗೆ ಪೂರಕವಾದ ವಾತಾವರಣ ಕಲ್ಪಿಸಲು ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಇಂಥಹ ಸೌಲಭ್ಯಗಳ ಅಡಿಯಲ್ಲಿ ಬಿಳಗುಳ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಶೂ ಮತ್ತು ಸಾಕ್ಸ್ ವಿತರಣೆ ಮಾಡಲಾಯಿತು. ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತಮ ಗುಣ ಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯಗಳಾದ ಸಮವಸ್ತ್ರ, ಶೂ, ಪುಸ್ತಕಗಳು, ಬಿಸಿ ಊಟ ಸೇರದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ. ಇದರ ಪ್ರಯೋಜನವನ್ನು ಪಡೆದುಕೊಂಡು ಮಕ್ಕಳು ಓದಿನ ಕಡೆ ಗಮನ ಹರಿಸಿ ಉತ್ತಮ ಸ್ಥಾನಕ್ಕೆ ಏರುವಲ್ಲಿ ಶ್ರಮ ವಹಿಸಬೇಕು ಎಂದು ಎ.ಸ್.ಡಿ.ಎಂ.ಸಿ ಅಧ್ಯಕ್ಷ ಬಾಲಕೃಷ್ಣ ಅವರು ಹೇಳಿದರು.
ನಂತರ ಮಾತನಾಡಿದ ಹೆಸಗಲ್ ಗ್ರಾ.ಪಂ. ಸದಸ್ಯ ಪ್ರಶಾಂತ್ ಗೌಡ ಅವರು, ಸರ್ಕಾರಿ ಶಾಲೆಯ ಮಕ್ಕಳು ಖಾಸಗಿ ಶಾಲೆಯ ಮಕ್ಕಳನ್ನು ನೋಡಿ ನೊಂದುಕೊಳ್ಳಬಾರದು ಎಂಬ ಕಾರಣಕ್ಕೆ ಸರ್ಕಾರ ಪೋಷಕರ ಸ್ಥಾನದಲ್ಲಿ ಇದ್ದುಕೊಂಡು ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವನ್ನು ನೀಡುತ್ತಿದೆ. ಮಕ್ಕಳು ತಮ್ಮ ಆಟಗಳ ಜೊತೆಗೆ ಓದಿನ ಕಡೆ ಹೆಚ್ಚಿನ ಗಮನ ಹರಿಸಿ ಒಳ್ಳೆಯ ಅಂಕಗಳನ್ನು ಗಳಿಸಿ ಶಿಕ್ಷಕರಿಗೆ ಮತ್ತು ಶಾಲೆಗೆ ಒಳ್ಳೆಯ ಹೆಸರನ್ನು ತಂದುಕೊಡಬೇಕು. ಸರ್ಕಾರ ನೀಡುವ ಎಲ್ಲಾ ಸೌಲಭ್ಯಗಳನ್ನು ಪಡೆಯುವಲ್ಲಿನ ಖುಷಿಯನ್ನು ಓದಿನಲ್ಲಿಯೂ ತೋರಸಿ ಒಳ್ಳೆಯ ಸ್ಥಾನಕ್ಕೆ ತಲುಪಿ ಸರ್ಕಾರದ ಶ್ರಮಕ್ಕೆ ಪ್ರತಿಫಲವನ್ನು ನೀಡಬೇಕು ಎಂದು ಮಕ್ಕಳಿಗೆ ತಿಳುವಳಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಗ್ರಾ.ಪಂ.ಉಪಾಧ್ಯಕ್ಷ ಶಿವು, ಗ್ರಾಮಸ್ಥ ಅಭಿಜಿತ್, ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರುಗಳಾದ ಹರೀಶ್, ಮುತ್ತಪ್ಪ, ಮುಖ್ಯ ಶಿಕ್ಷಕಿ ಚಂದ್ರಾವತಿ ಸೇರಿದಂತೆ ಶಾಲೆಯ ಶಿಕ್ಷಕ ವೃಂದದವರು ಹಾಜರಿದ್ದರು.