ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ.

32

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚಾಗುತ್ತಿವೆ. ಮೆಟ್ರೋ ಟ್ರ್ಯಾಕ್‍ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೆಟ್ರೋ ಬರುತ್ತಿದ್ದಂತೆ ಬಿಹಾರ ಮೂಲದ ಸಿದ್ದಾರ್ಥ್ ವಾಯುಪಡೆಯ ಮಾಜಿ ವ್ಯಕ್ತಿಯೊಬ್ಬರು ಮೆಟ್ರೋ ಟ್ರ್ಯಾಕ್ ಮೇಲೆ ಹಾರಿದ್ದಾರೆ. ಕೂಡಲೇ ಮೆಟ್ರೋ ರೈಲು ಸಂಚಾರ ಬಂದ್ ಮಾಡಿದ ಮೆಟ್ರೋ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ವೈಟ್‍ಫೀಲ್ಡ್ ಕಡೆಯಿಂದ ಕೆಂಗೇರಿ ಕಡೆಗೆ ಮೆಟ್ರೋ ರೈಲು ತೆರಳುತ್ತಿತ್ತು. ಈ ವೇಳೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಸಿದ್ದಾಥ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ, ಮೆಟ್ರೋ ಸಿಬ್ಬಂದಿಯ ಸಮಯೋಚಿತ ಕ್ರಮದಿಂದಾಗಿ ಅವರ ಜೀವ ಉಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ವರದಿಯ ಪ್ರಕಾರ ಯಾವುದೇ ಗಾಯಗಳು ವರದಿಯಾಗಿಲ್ಲ. ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಸಿದ್ದಾರ್ಥ ನನ್ನು ಜ್ಞಾನಭಾರತಿ ಸ್ಟೇಷನ್ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ಮಾಡುತ್ತಿದ್ದಾರೆ.