ಬೆಂಗಳೂರು: ನಮ್ಮ ಮೆಟ್ರೋ ರೈಲು ಟಿಕೆಟ್ ಬೆಲೆ ಏರಿಕೆಗೆ ಮುಂದಾಗಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇದೀಗ ಆ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದೆ. ಮೆಟ್ರೋ ಟಿಕೆಟ್ ದರ ಏರಿಕೆ ಸಂಬಂಧ ಕೇಂದ್ರ ಸರ್ಕಾರ ವರದಿ ಕೇಳಿದ್ದು, ಸದ್ಯದ ಮಟ್ಟಿಗೆ ಅನುಮತಿ ಕೊಟ್ಟಿಲ್ಲ. ಹೀಗಾಗಿ ಮೆಟ್ರೋ ರೈಲು ಟಿಕೆಟ್ ಬೆಲೆ ಹೆಚ್ಚಳ ಈ ವರ್ಷ ಅನುಮಾನ ಎಂದು ಮೂಲಗಳು ತಿಳಿಸಿವೆ. ಕಳೆದ ವಾರವಷ್ಟೇ ಟಿಕೆಟ್ ದರ ಹೆಚ್ಚಳ ಸಂಬಂಧ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸಭೆ ನಡೆಸಿತ್ತು. ಶೇಕಡ 45ರಷ್ಟು ಬೆಲೆ ಏರಿಕೆ ಮಾಡಲು ನಿರ್ಧರಿಸಿತ್ತು. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿಲ್ಲ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಸರ್ಕಾರಿ ಬಸ್ ಪ್ರಯಾಣ ದರ ಏರಿಕೆಯಾಗಿದೆ. ಈ ಸಂದರ್ಭದಲ್ಲಿ ಮತ್ತೆ ಮೆಟ್ರೋ ಟಿಕೆಟ್ ಬೆಲೆ ಕೂಡ ಏರಿಕೆಯಾದರೆ ಜನರಿಗೆ ಹೆಚ್ಚಿನ ಹೊರೆ ಆಗಲಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ.










