ಮೆಟ್ರೋ ಪ್ರಯಾಣ ದರ ಏರಿಕೆ: ಬಿಜೆಪಿಯಿಂದ ಸುಳ್ಳು ಮತ್ತು ತಿರುಚಿದ ಮಾಹಿತಿ, ಸಿಎಂ ಸಿದ್ದರಾಮಯ್ಯ ಕಿಡಿ.

23

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಯನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಸ್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದು ಹೇಳಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.