ಕಲಬುರಗಿ : ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದ ಸಿಬ್ಬಂದಿಯೊಬ್ಬ ಡೆತ್ ನೋಟ್ ಬರೆದಿಟ್ಟು, ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ. ಕಿನಾರಾ ಕ್ಯಾಪಿಟಲ್ ನ ಕಲಬುರಗಿ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಕೃಷ್ಣಕಾಂತ್ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ನಗರದ ಕೆಬಿಎನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಾನು ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಸಮರ್ಥವಾಗಿ ಕೆಲಸ ಮಾಡಿದರೂ ಅನಗತ್ಯವಾಗಿ ಕಲಬುರಗಿಯಿಂದ ವಿಜಯಪುರಕ್ಕೆ ವರ್ಗಾವಣೆ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ್ರೆ ಅಪಹಾಸ್ಯ ಮಾಡಿ ಅವ್ಯಾಚ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ತೊಂದರೆ ಕೊಟ್ಟಿದ್ದಾರೆ. ಈ ವಿಷಯವಾಗಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮಕೈಗೊಳ್ಳುವ ಬದಲಾಗಿ ಯಾವುದೇ ನೋಟಿಸ್ ನೀಡದೆ ನನ್ನನ್ನು ಕೆಲಸದಿಂದ ತೆಗೆದುಹಾಕಿದ್ದಾರೆ ಎಂದು ಆರೋಪಿಸಿದ ಕೃಷ್ಣಕಾಂತ್, ತನ್ನ ಆತ್ಮಹತ್ಯೆಗೆ ಕಿನಾರಾ ಕ್ಯಾಪಿಟಲ್ ನ ಐದು ಜನ ಅಧಿಕಾರಿಗಳ ಹೆಸರು ಪ್ರಸ್ತಾಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಎಂಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










