ಮೈಸೂರು ಗ್ಯಾಂಗ್ ರೇಪ್ ಪ್ರಕರಣ : ಇಂದು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ…

79
firstsuddi

ಮೈಸೂರು : ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಗಸ್ಟ್ 24ರಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿಯ ಮೇಲೆ ತಮಿಳುನಾಡು ಮೂಲದ ಏಳು ಮಂದಿ ಸಾಮೂಹಿಕ ಅತ್ಯಾಚಾರ ಮಾಡಿ ತಲೆ ಮರೆಸಿಕೊಂಡಿದ್ದು, ಅದರಲ್ಲಿ ಆರು ಜನರನ್ನು ಪೊಲೀಸರು ಬಂಧಿಸಿದ್ದರು. ಆನಂತರ ನಗರದ ಮೂರನೇ ಜೆಎಂಎಫ್​​ ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಂಧಿತ ಆರೋಪಿಗಳನ್ನು ವಿಚಾರಣೆ ಸಲುವಾಗಿ 10 ದಿನ ತಮ್ಮ ಕಸ್ಟಡಿಗೆ ನೀಡಬೇಕೆಂದು ಕೇಳಿಕೊಂಡಿದ್ದರು. ಅದರಂತೆ ಬಂಧಿತ ಆರು ಆರೋಪಿಗಳನ್ನೂ ತಮ್ಮ ಸುಪರ್ದಿಗೆ ತೆಗೆದುಕೊಂಡ ಪೊಲೀಸರು ಈಗಾಗಲೇ ಮಹಜರು, ವೈದ್ಯಕೀಯ ಪರೀಕ್ಷೆ ಸೇರಿದಂತೆ ಎಲ್ಲಾ ಕಾನೂನು ಪ್ರಕ್ರಿಯೆ ಮುಗಿಸಿದ್ದಾರೆ. ಈ ಕಾಲಾವಕಾಶ ಇಂದಿಗೆ ಮುಗಿಯಲಿದ್ದು, ಇಂದು ಆರು ಜನ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

ಅತ್ಯಾಚಾರಿಗಳ ಜಾಡು ಹಿಡಿದು ಹೊರಟ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿ ತಮಿಳುನಾಡಿನ ಮೂಲದ ಐವರನ್ನು ಮೊದಲು ಬಂಧಿಸಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಈ ಪ್ರಕರಣದಲ್ಲಿ ಏಳು ಜನ ಭಾಗಿಯಾಗಿರುವುದು ತನಿಖೆಯಿಂದ ಗೊತ್ತಾಗಿದೆ. ಆನಂತರ ತಮಿಳುನಾಡಿನ ತಿರುಪ್ಪೂರಿನ ಬಳಿಯ ಗ್ರಾಮವೊಂದರಲ್ಲಿ ಆರನೇ ಆರೋಪಿಯನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದ. ಏಳನೇ ಆರೋಪಿಯನ್ನು ನಿನ್ನೆ ಬಂಧಿಸಲಾಗಿದೆ ಎನ್ನಲಾಗಿದ್ದು,ಈ ಬಗ್ಗೆ ಯಾವುದೇ ಖಚಿತ ಮಾಹಿತಿಯನ್ನು ಪೊಲೀಸರು ನೀಡುತ್ತಿಲ್ಲ.