ಮೋಹನ್ ಭಾಗವತ್ ದೇಶದ್ರೋಹ ಎಸಗಿದ್ದಾರೆ: ರಾಹುಲ್ ಗಾಂಧಿ.

37

ನವದೆಹಲಿ: ಭಾರತಕ್ಕೆ ನಿಜವಾದ ಸ್ವಾತಂತ್ರ್ಯ 1947 ರಲ್ಲಿ ಸಿಕ್ಕಿಲ್ಲ, ರಾಮ ಮಂದಿರ ಪ್ರತಿಷ್ಠಾಪನಾ ದಿನದಂದು ಸಿಕ್ಕಿತು ಎಂಬ ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಕಾಂಗ್ರೆಸ್ ಇಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮೋಹನ್ ಭಾಗವತ್ ಅವರ ಹೇಳಿಕೆ ಎಲ್ಲಾ ಭಾರತೀಯರಿಗೆ ಮಾಡಿದ ಅವಮಾನ ಎಂದು ಟೀಕಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಆರ್‍ಎಸ್‍ಎಸ್ ಮುಖ್ಯಸ್ಥರು ದೇಶದ್ರೋಹ ಎಸಗಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಕಾಂಗ್ರೆಸ್‍ನ ಹೊಸ ಪ್ರಧಾನ ಕಚೇರಿ, ಇಂದಿರಾ ಗಾಂಧಿ ಭವನ ಉದ್ಘಾಟನೆಯ ಬಳಿಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಕಾಂಗ್ರೆಸ್ ಅಧ್ಯಕ್ಷ, ಜನರು ಅಂತಹ ಅಸಂಬದ್ಧ ಮಾತುಗಳನ್ನು ಕೇಳುವುದನ್ನು ನಿಲ್ಲಿಸುವ ಸಮಯ ಬಂದಿದೆ ಎಂದು ಹೇಳಿದರು. ಮೋಹನ್ ಭಾಗವತ್ ಅವರು ಸ್ವಾತಂತ್ರ್ಯ ಚಳುವಳಿ ಮತ್ತು ಸಂವಿಧಾನದ ಕುರಿತು ತಮ್ಮ ಅಭಿಪ್ರಾಯವನ್ನು ದೇಶಕ್ಕೆ ಹೇಳುವ ಧೈರ್ಯ ಹೊಂದಿದ್ದಾರೆ. ಅವರು ನಿನ್ನೆ ಹೇಳಿದ್ದು ದೇಶದ್ರೋಹ. ಏಕೆಂದರೆ ಅವರು ಸಂವಿಧಾನ ಅಮಾನ್ಯವಾಗಿದೆ ಮತ್ತು ಬ್ರಿಟಿಷರ ವಿರುದ್ಧದ ಹೋರಾಟವೂ ಅಮಾನ್ಯ ಎಂದು ಹೇಳುತ್ತಿದ್ದಾರೆ ಎಂದು ತಿಳಿಸಿದರು. ಇದನ್ನು ಸಾರ್ವಜನಿಕವಾಗಿ ಹೇಳುವ ದಿಟ್ಟತನ ಅವರಿಗೆ ಇದೆ. ಬೇರೆ ಯಾವುದೇ ದೇಶದಲ್ಲಿ ಈ ರೀತಿ ಹೇಳಿದ್ದರೆ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಲಾಗುತ್ತದೆ. ಇದು ಸತ್ಯ ಎಂದು ರಾಹುಲ್ ಗಾಂಧಿ ಹೇಳಿದರು.