ಬೆಂಗಳೂರು : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಲ್ಲಿ ಒಬ್ಬರಿಗೆ ಒಂದೇ ಟಿಕೆಟ್ ನೀತಿಯನ್ನು ಅನುಸರಿಸಲಾಗುತ್ತಿದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಕಾಂಗ್ರೆಸ್ ನಲ್ಲಿ ವ್ಯಕ್ತಿ ಮುಖ್ಯ ಅಲ್ಲ, ಪಕ್ಷವೇ ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಳೆದ ಬಾರಿಯಂತೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆಗೆ ಅಂತ್ಯ ಹಾಡಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ದೇಣಿಗೆ ಸಂಗ್ರಹವು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಹಲವರು ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರಗಳನ್ನು ನಿರ್ವಹಿಸಲು ಆರ್ಥಿಕ ಶಕ್ತಿಯ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ಎಂದು ತಮ್ಮ ನಿಲುವು ಸ್ಪಷ್ಟಪಡಿಸಿದರು.
ಟಿಕೆಟ್ ಆಕಾಂಕ್ಷಿಗಳು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡುತ್ತಿರುವುದರಿಂದ ತೊಂದರೆ ಆಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಸಾಧ್ಯವಿಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳ ಜೊತೆಗೆ ಇಂದು ಮಹತ್ವದ ಸಭೆ ನಡೆಯಲಿದ್ದು, ಈ ವಿಚಾರವಾಗಿ ಮಾತನಾಡಿದ ಡಿಕೆ ಶಿವಕುಮಾರ್, ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದವರ ಹಿನ್ನೆಲೆ ಏನು? ಪಕ್ಷಕ್ಕೆ ಅವರು ಯಾವ ರೀತಿಯಾದಂತಹ ಕೆಲಸ ಮಾಡಿದ್ದಾರೆ? ಇನ್ನು ಮುಂದೆ ಕೆಲಸ ಮಾಡಲು ಏನು ಯೋಜನೆಯನ್ನು ತಯಾರಿ ಮಾಡಿಕೊಂಡಿದ್ದಾರೆ? ಎಂಬ ಬಗ್ಗೆ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅಭ್ಯರ್ಥಿ ಆಕಾಂಕ್ಷಿಗಳ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.










