ತಿರುವನಂತಪುರ: 17 ವರ್ಷದ ಬಾಲಕಿಯೊಬ್ಬಳು ಯೂಟ್ಯೂಬ್ ವೀಡಿಯೋ ನೋಡಿಕೊಂಡು ತಾನೇ ಹೆರಿಗೆ ಮಾಡಿಕೊಳ್ಳುವ ಮೂಲಕ ಗಂಡು ಮಗುವಿಗೆ ಜನ್ಮ ನೀಡಿರುವ ವಿಚಿತ್ರ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಅಕ್ಟೋಬರ್ 20ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹುಡುಗಿ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಹುಡುಗಿ ಮತ್ತು 22 ವರ್ಷದ ಯುವಕ ಇಬ್ಬರು ಹಲವು ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಕುಟುಂಬಸ್ಥರು ಕಾನೂನುಬದ್ಧವಾಗಿ ಬಾಲಕಿಗೆ 18 ವರ್ಷ ತುಂಬಿದ ಬಳಿಕ ಇಬ್ಬರಿಗೂ ಮದುವೆ ಮಾಡಲು ಚಿಂತನೆ ನಡೆಸಿದ್ದರು. ಈ ಮಧ್ಯೆ ಆಕೆ ಗರ್ಭಿಣಿಯಾಗಿದ್ದಾಳೆ. ಹೀಗಾಗಿ ಯೂಟ್ಯೂಬ್ ನಲ್ಲಿ ವಿಡಿಯೋ ನೋಡಿಕೊಂಡು ಅದರಂತೆ ಮಗುವಿಗೆ ಜನ್ಮ ನೀಡಿದ್ದಾಳೆ. ಈ ವೇಳೆ ಸೋಂಕು ಕಾಣಿಸಿಕೊಂಡಿರುವ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸದ್ಯ ಮಂಜೇರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ತಾಯಿ ಮತ್ತು ಮಗುವನ್ನು ದಾಖಲಿಸಲಾಗಿದ್ದು, ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಆಕೆಯನ್ನು ಗರ್ಭಿಣಿ ಮಾಡಿದ 21 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.










