ಯೋಗಿ ಆದಿತ್ಯನಾಥ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ; ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಚರ್ಚೆ…

65
firstsuddi

ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಜೆಡಿಎಸ್ ಪಕ್ಷದ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ಮಾಡಿ ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳ ಕುರಿತು ನಿಖಿಲ್‌ಗೆ ಯೋಗಿ ಆದಿತ್ಯನಾಥ್ ಪಾಠ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ನಿಖಿಲ್ ಕುಮಾರಸ್ವಾಮಿ, ರಾಮ ಲಕ್ಷ್ಮಣ ಸೀತೆಯ ವಿಗ್ರಹವನ್ನು ಉಡುಗೊರೆಯಾಗಿ ನೀಡಿದ್ದಾರೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ನಿಖಿಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ… ಎಂದು ಬರೆದುಕೊಂಡಿದ್ದಾರೆ.

ಕಳೆದ ತಿಂಗಳು ದೆಹಲಿಯಲ್ಲಿ ನಡೆದ ಅಮಿತ್ ಶಾ, ಜೆಪಿ ನಡ್ಡಾ ಮತ್ತು ಕುಮಾರಸ್ವಾಮಿ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಧಿಕೃತ ಮುದ್ರೆ ಬಿದ್ದಿತ್ತು. ಈ ವೇಳೆ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುವ ಅವಕಾಶ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತ್ತು. ಆದರೆ ದೆಹಲಿಗೆ ಸಿ.ಎಂ. ಇಬ್ರಾಹಿಂ ಅವರನ್ನು ಬಿಟ್ಟು ಹೋದದ್ದು, ಮೈತ್ರಿ ಮಾಡಿಕೊಂಡದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.