ರಸ್ತೆ ಸ್ವಚ್ಛ ಮಾಡುವ ಮೂಲಕ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನದ ಆಚರಣೆ…

76
firstsuddi

ಚಿಕ್ಕಮಗಳೂರು: ಬಹುಜನ ಸಮಾಜ ಪಕ್ಷ ಮತ್ತು ಜಿಲ್ಲಾ ಸಹೋದರತ್ವ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಸಾಮೂಹಿಕ ಶ್ರಮದಾನದೊಂದಿಗೆ ರಸ್ತೆ ಸ್ವಚ್ಛ ಮಾಡುವ ಮೂಲಕ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನವನ್ನು ನಗರದಲ್ಲಿ ಇಂದು ಅರ್ಥಪೂರ್ಣವಾಗಿ ಆಚರಿಸಿದರು.

ನಸುಕು ಹರಿಯುತ್ತಿದ್ದಂತೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನೂರಕ್ಕೂ ಹೆಚ್ಚು ಕಾರ್ಯಕರ್ತರು ಪಕ್ಷದ ಮುಖಂಡರೊಂದಿಗೆ ಹಿರೇಮಗಳೂರು ಸಮೀಪವಿರುವ ರೈಲ್ವೆ ಮೇಲ್ಸೇತುವೆಯ ಎರಡೂ ಬದಿಗಳಲ್ಲಿ ಬೆಳೆದು ನಿಂತಿದ್ದ ಹುಲ್ಲು, ಕಸ, ಕಡ್ಡಿಗಳನ್ನು ಶ್ರಮಧಾನದ ಮೂಲಕ ತೆರವುಗೊಳಿಸಿ ಸ್ವಚ್ಛಗೊಳಿಸಿದರು.

ಈ ವೇಳೆ ಮಾತನಾಡಿದ ಬಿಎಸ್‍ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಸಾಮಾಜಿಕ ಪರಿವರ್ತನೆಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಮತ್ತು ಸಿದ್ದಾಂತಗಳಿಗೆ ಕಾಯಕದ ಮೂಲಕ ನಮನ ಸಲ್ಲಿಸುವ ನಿಟ್ಟಿನಲ್ಲಿ ಈ ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಬದುಕಿನುದ್ದಕ್ಕೂ ಪ್ರತಿಪಾದಿಸಿದ ನಾರಾಯಣ ಗುರುಗಳ ಆದರ್ಶ ಎಲ್ಲರಿಗೂ ದಾರಿದೀಪವಾಗಬೇಕು ಎಂದರು.

ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ, ಸಿದ್ಧಾಂತಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಉಪಾಧ್ಯಕ್ಷ ಕೆ.ಆರ್. ಗಂಗಾಧರ್, ತಾಲೂಕು ಅಧ್ಯಕ್ಷ ಹೆಚ್.ಕುಮಾರ್ ಮಾತನಾಡಿದರು. ಅಸೆಂಬ್ಲಿ ಸಂಯೋಜಕಿ ಕೆ.ಎಸ್. ಮಂಜುಳ, ಪಕ್ಷದ ಮುಖಂಡರಾದ ಆರ್.ವಸಂತ್, ನವೀನ್, ಸಿದ್ದಯ್ಯ, ಗಿರೀಶ್, ಹೊನ್ನಪ್ಪ, ಸವಿತಾ ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.