ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 10 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ 41 ಇದ್ದ ಕೊರೊನಾ ಸೋಂಕಿತ ಸಂಖ್ಯೆ ಇಂದು 51ಕ್ಕೆ ಏರಿಕೆಯಾಗಿದೆ. ಇಂದು ರಾತ್ರಿ ಸೋಂಕಿತರ ಸಂಖ್ಯೆ ಎಷ್ಟಾಗುತ್ತೋ ಗೊತ್ತಿಲ್ಲ. ಹೀಗಾಗಿ ಚಿಕಿತ್ಸೆ ಹಾಗೂ ಪರೀಕ್ಷೆಗಾಗಿ ಎಲ್ಲಿ ವ್ಯವಸ್ಥೆ ಮಾಡಬೇಕು. ಸಿಬ್ಬಂದಿಗಳು ಹೇಗೆ ಕಾರ್ಯನಿರ್ವಹಿಸಬೇಕು ಎಂದು ಚರ್ಚೆ ಮಾಡಿದ್ದೇವೆ. ಹಾಗೂ ರಾಜ್ಯಾಧ್ಯಂತ ಹೇಗೆ ಕ್ರಮ ಕೈಗೊಳ್ಳಬೇಕು ಎಂದು ಟಾಸ್ಕ್ ಫೋರ್ಸ್ ಜೊತೆಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.










