ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಆಂಧ್ರ ಪ್ರದೇಶದಿಂದ ಆಗಮಿಸಿದ್ದ 60 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮೃತ ವೃದ್ಧ ಅನಂತಪುರ ಜಿಲ್ಲೆಯ ನಿವಾಸಿಯಾಗಿದ್ದು, ಅನಾರೋಗ್ಯದ ಹಿನ್ನೆಲೆ, ಆಂಧ್ರ ಪ್ರದೇಶದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದರು. ಈ ಮೊದಲೇ ಶುಗರ್, ಲೋ ಬಿಪಿ, ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧನಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ವೃದ್ಧನನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಬಳಿಕ ವೃದ್ಧನಿಗೆ ಕೊರೊನಾ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.










