ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ನೀಟ್, ಜೆಇಇ, ಸಿಇಟಿ ಆನ್‍ಲೈನ್ ಕೋಚಿಂಗ್ ತರಗತಿ’ ಆರಂಭಿಸಲಾಗಿದೆ. ವಿಧಾನಸೌಧದಲ್ಲಿ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೀಟ್/ಜೆಇಇ/ಸಿಇಟಿ ಆನ್‍ಲೈನ್ ಕೋಚಿಂಗ್ ತರಗತಿಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಸಚಿವರು, ‘2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಲಾದ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ. ತರಬೇತಿಗೆ ಪದವಿಪೂರ್ವ ಕಾಲೇಜಿನ 20,000 ವಿದ್ಯಾರ್ಥಿಗಳು ಹಾಗೂ ಆದರ್ಶ ಕಾಲೇಜಿನ 5,000 ವಿದ್ಯಾರ್ಥಿಗಳು ಸೇರಿ ಒಟ್ಟು 25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಸಹ ಇತ್ತೀಚಿನ ದಿನಗಳಲ್ಲಿ ಉತ್ತಮ ಮೂಲಭೂತ ಸೌಕರ್ಯಗಳನ್ನು ಹೊಂದಿದ್ದು, ಶೈಕ್ಷಣಿಕ ಚಟುವಟಿಕೆಗಳು ಸಹ ಉನ್ನತ ಮಟ್ಟದಾಗಿದ್ದು ಹಾಗೂ ಹೆಚ್ಚಿನ ಸೌಕರ್ಯ ನೀಡಲಾಗಿದೆ. ಉತ್ತಮ ದಾಖಲಾತಿಯೊಂದಿಗೆ ಉತ್ತಮ ಫಲಿತಾಂಶವನ್ನು ಸಹ ನಿರೀಕ್ಷಿಸಬಹುದು ಎಂದು ತಿಳಿಸಿದರು.









