ರಾಮನಗರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಟ್ರೂಪ್ ಲೈನ್ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿ ಭಕ್ಷಿ ಕೆರೆ ಏರಿ ಒಡೆದು ಹಾನಿಯಾದ 100ರಿಂದ 150 ಮನೆಗಳಿಗೆ ಭೇಟಿ ನೀಡಿದರು. ನಂತರ ಗೌಸಿಯಾನಗರದಲ್ಲಿ ಹಾನಿ ಪರಿಶೀಲಿಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಿಎಂ ಬೊಮ್ಮಾಯಿ ಅವರಿಗೆ ಪರಿಸ್ಥಿತಿ ಬಗ್ಗೆ ವಿವರಿಸಿದರು. ಬಿದ್ದಿರುವ ಮನೆಗಳಿಗೆ ತಕ್ಷಣ 1 ಲಕ್ಷ ರೂಪಾಯಿ ಹಾಗೂ ಒಟ್ಟಾರೆ 5 ಲಕ್ಷ ರೂಪಾಯಿ ಪರಿಹಾರವನ್ನು ಹಂತ ಹಂತವಾಗಿ ನೀಡಲಾಗುವುದು ಎಂದು ಸಿಎಂ ತಿಳಿಸಿದರು.

ಮಳೆಯಿಂದ ಬೆಂಗಳೂರು- ಮೈಸೂರು ರಸ್ತೆಯಲ್ಲಿ ಸಮಸ್ಯೆಯಾಗಿದೆ. ಹೆದ್ದಾರಿಯ ಹಲವೆಡೆ ಕಾಲುವೆ ಮುಚ್ಚಿರುವುದರಿಂದ ಈ ಸಮಸ್ಯೆಯಾಗಿದೆ. ಕಾಲುವೆ ತೆರವುಗೊಳಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ ಎಂದರು.
ಮಳೆಯಿಂದ ರೇಷ್ಮೆ ರೀಲರ್ಸ್ ಗೆ ಆಗಿರುವ ನಷ್ಟವನ್ನು ಸರ್ಕಾರವೇ ಭರಿಸಲಿದೆ. ಸಂಕಷ್ಟದಲ್ಲಿರುವವರಿಗೆ ಶೀಘ್ರದಲ್ಲೇ ತಾತ್ಕಾಲಿಕ ಪರಿಹಾರ ಒದಗಿಸಲಾಗುವುದು, ರಾಜ್ಯ ಸರ್ಕಾರದ ವತಿಯಿಂದ ಪಡಿತರ ಕಿಟ್ ವಿತರಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಂದಾಯ ಸಚಿವ ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಸಾಥ್ ನೀಡಿದರು.










