ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳ ಬಂಧನ…

32
firstsuddi

ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಬಂಧಿಸಿದೆ.

ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ.

ಈ ಹಿಂದೆ ಪ್ರಕರಣ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಎನ್ಐಎ, ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಐಇಡಿ ತಂದಿದ್ದ ಮುಸಾವೀರ್ ಹಾಗೂ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮೀಲ್ ಷರೀಫ್ ಎಂಬಾತನ ಬಂಧಿಸಲಾಗಿದೆ ಎಂದು ತಿಳಿಸಿತ್ತು.

ಶಂಕಿತ, ಮುಸ್ಸಾವಿರ್ ಹುಸೇನ್ ಶಾಜಿಬ್ ಪತ್ತೆಗೆ ಆತ ಧರಿಸಿದ್ದ ಕ್ಯಾಪ್‌ನ ಸಹಾಯದಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಮತೀನ್ ತಾಹಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮುಸ್ಸಾವಿರ್ ಹುಸೇನ್ ಶಾಜಿಬ್​ನದ್ದೇ ಕೃತ್ಯ ಎಂಬುದು ದೃಢಪಟ್ಟಿತ್ತು. ನಂತರ ಆತನ ಪತ್ತೆಗೆ ಬಲೆಬೀಸಲಾಗಿತ್ತು. ಶಂಕಿತ ಭಯೋತ್ಪಾದಕ ಕರ್ನಾಟಕ ಮೂಲದವನಾಗಿದ್ದು, ಮಲೆನಾಡು ಪ್ರದೇಶದಲ್ಲಿ ಉಗ್ರಗಾಮಿ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಇದೆ.

ಈಗಾಗಲೇ ಭಯೋತ್ಪಾದನೆ ಚಟುವಟಿಕೆಗಳ ಶಂಕೆಯ ಮೇಲೆ ಜೈಲಿನಲ್ಲಿರುವ ಉಗ್ರಗಾಮಿಗಳನ್ನು ವಿಚಾರಣೆಗೆ ಒಳಪಡಿಸಿದ್ದೂ ಸಹ ಬಾಂಬರ್​​ನ ಪತ್ತೆಗೆ ನೆರವಾಯಿತು. ಈ ವೇಳೆ, ಜೈಲಿನಲ್ಲಿದ್ದ ಶಂಕಿತ ಉಗ್ರ ಶಾರಿಕ್, ಮತೀನ್ ಮತ್ತು ಈಗ ವಶಕ್ಕೆ ಪಡೆಯಲಾಗಿರುವ ಮುಸ್ಸಾವಿರ್ ಹುಸೇನ್ ನಡುವೆ ಸಂಪರ್ಕ ಇರುವುದೂ ಬಹಿರಂಗಗೊಂಡಿತ್ತು. ಕಳೆದ 3-4 ವರ್ಷಗಳಿಂದ ಅಧಿಕಾರಿಗಳಿಂದ ತಪ್ಪಿಸಿಕೊಳ್ಳುತ್ತಿದ್ದರೂ, ಶಂಕಿತನ ಗುರುತು, ವಿಳಾಸ ಮತ್ತು ಇತಿಹಾಸಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಕಲೆಹಾಕುವಲ್ಲಿ ಎನ್ಐಎ ಅಧಿಕಾರಿಗಳು ಯಶಸ್ವಿಯಾಗಿದ್ದರು.

ಮಾರ್ಚ್ 1 ರಂದು ವೈಟ್‍ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಈ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದರು. ಬಳಿಕ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲಾಗಿದ್ದು, ಶಂಕಿತ ಉಗ್ರನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇತ್ತ ಘಟನೆ ನಡೆದು ವಾರದ ಬಳಿಕ ಕೆಫೆಯನ್ನು ರೀ ಓಪನ್ ಮಾಡಲಾಗಿದೆ.