ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ನಿರ್ಬಂಧಕಾಜ್ಞೆಯನ್ನು ಹೈಕೋರ್ಟ್ ತೆರೆವುಗೊಳಿಸಿದೆ.
ತಮ್ಮ ವಾದವನ್ನು ಆಲಿಸದೇ ನೀಡಿರುವ ಆದೇಶವನ್ನು ಪ್ರಶ್ನಿಸಿ ಡಿ.ರೂಪಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ.
ಏನಿದು ಪ್ರಕರಣ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೆಲ ಫೋಟೋಗಳನ್ನು ಡಿ.ರೂಪಾ ಹಂಚಿಕೊಂಡಿದ್ದರು. ಅಲ್ಲದೆ ರೋಹಿಣಿ ಸಿಂಧೂರಿ ವಿರುದ್ಧ ಕೆಲ ಆರೋಪಗಳನ್ನು ಮಾಡಿದ್ದರು. ಈ ನಡುವೆ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳು, ಫೋಟೋಗಳನ್ನು ಪ್ರಕಟ ಮಾಡದಂತೆ ರೂಪಾ ಮತ್ತು ಇತರ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಸಿಂಧೂರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ 2023 ಫೆಬ್ರವರಿ 23ರಂದು ಏಕಪಕ್ಷೀಯವಾಗಿ ನಿರ್ಬಂಧಕಾಜ್ಞೆ ವಿಧಿಸಿತ್ತು. ಅಲ್ಲದೇ ಪ್ರತಿವಾದಿಗೆ ನೋಟಿಸ್ ಜಾರಿ ಮಾಡಿತ್ತು.










