ಲಂಚ ಪ್ರಕರಣ – ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಜಾಮೀನು ಮಂಜೂರು…

38
firtsuddi

ಬೆಂಗಳೂರು: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಟೆಂಡರ್​ಗಾಗಿ ಲಂಚ ಪಡೆದ ಆರೋಪ ಸಂಬಂಧ ಇತ್ತೀಚೆಗಷ್ಟೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಪುತ್ರ ಮಾಡಾಳ್ ಪ್ರಶಾಂತ್​ಗೂ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಬಿಜೆಪಿ ಶಾಸಕರ ಪುತ್ರ ಮಾಡಾಳ್ ಪ್ರಶಾಂತ್ ಅವರನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ಕಚೇರಿಯಲ್ಲಿ ತಂದೆಯ ಪರವಾಗಿ 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಮಾರ್ಚ್ 2 ರಂದು ಬಂಧಿಸಿದ್ದರು.

ಮಾಡಾಳ್ ಪ್ರಶಾಂತ್ ಬಂಧನದ ನಂತರ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆ ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ 8.23 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.