ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಲಾರಿ ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ನಡೆದಿದೆ.
ಬೆಂಗಳೂರಿನಿಂದ ಮೈಸೂರು ಕಡೆಗೆ ಟಿಟಿ ವಾಹನ ತೆರಳುತ್ತಿತ್ತು. ಟಿಟಿ ವಾಹನ ಚಾಲಕನ ಅತಿಯಾದ ವೇಗದಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಮೃತರು ಮೈಸೂರಿನ ಜಿಲ್ಲೆಗೆ ಸೇರಿದವರು ಎಂದು ತಿಳಿದು ಬಂದಿದೆ. ಭೀಕರ ಅಪಘಾತದಲ್ಲಿ ಟಿಟಿಯಲ್ಲಿದ್ದ ಐದಾರು ಮಂದಿಗೆ ಗಾಯಗಳಾಗಿವೆ. ಅವರನ್ನೆಲ್ಲ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.










