ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬೀಳಲಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಅರ್ಜಿಯ ವಿಚಾರಣಾ ಮಾನ್ಯತೆ ಕುರಿತು ತೀರ್ಪು ಕಾಯ್ದಿರಿಸಿದ್ದು, ಇಂದು ಮಧ್ಯಾಹ್ನ 2.30ಕ್ಕೆ ಪ್ರಕಟಿಸಲಿದೆ. ಇಡೀ ಬ್ಯಾಂಕಿಂಗ್ ವಲಯದ ಪ್ರಾಮಾಣಿಕತೆಯನ್ನು ಖಾತರಿಪಡಿಸಲು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿದೆ ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪರ ವಕೀಲರು ವಾದಿಸಿದ್ದರು. ಅರ್ಜಿಯ ಸಿಂಧುತ್ವದ ಬಗ್ಗೆ ಪ್ರಾಥಮಿಕ ಪ್ರಶ್ನೆ ಇದೆ. ಏಕೆಂದರೆ ಇದು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವಿನ ಘರ್ಷಣೆಯಾಗಿದೆ. ಈ ಅರ್ಜಿಯ ಮೂಲವೇ ಕೇಂದ್ರ ಸರ್ಕಾರ ಹೊರಡಿಸಿರುವ ಒಂದು ಸುತ್ತೋಲೆ, ಅಂತಹ ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರ ಮತ್ತು ಪೊಲೀಸರ ನಡುವಿನ ಅಧಿಕಾರದಲ್ಲಿ ಮಧ್ಯಪ್ರವೇಶ ಮಾಡಲು ಯತ್ನಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು.










