ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯುವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಗೆ ಚಾಲನೆ ನೀಡಿದ್ದಾರೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ್ ಡಿಜಿಟಲ್ ಮಿಷನ್ ಇಂದಿನಿಂದ ಕಾರ್ಯಾರಂಭ ಆಗುತ್ತಿದೆ. 21 ನೇ ಶತಮಾನದಲ್ಲಿ ಭಾರತವು ಮುಂದುವರೆಯಲು ಇಂದು ಅತ್ಯಂತ ಮಹತ್ವದ ದಿನ. ಕಳೆದ 7 ವರ್ಷಗಳ ಹಿಂದೆ ಆರಂಭಿಸಿದ ಆರೋಗ್ಯ ಅಭಿಯಾನಕ್ಕೆ ಇಂದು ಹೊಸ ಟಚ್ ಸಿಕ್ಕಿದೆ. ಇದು ಭಾರತೀಯರ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿಕಾರಿ ಶಕ್ತಿಯನ್ನು ತುಂಬಲಿದೆ. ಈ ಮಿಷನ್ ದೇಶದ ಬಡ ಮತ್ತು ಮಧ್ಯಮ ವರ್ಗದವರಿಗೆ ಅನುಕೂಲ ಆಗಲಿದೆ ಎಂದರು.
3 ವರ್ಷಗಳ ಹಿಂದೆ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಆಯುಷ್ಮಾನ್ ಯೋಜನೆಯನ್ನ ಆರಂಭಿಸಲಾಯಿತು. ಇಂದಿನಿಂದ ದೇಶಾದ್ಯಂತ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಶುರುವಾಗುತ್ತಿದ್ದು, ನನಗೆ ಸಂತೋಷವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಆಯುಷ್ಮಾನ್ ಯೋಜನೆ ದೇಶದ ಸಾವಿರಾರು ಬಡ ಕುಟುಂಬಗಳ ಕೈಹಿಡಿದಿದೆ. ಇದೀಗ ಇಂತಹ ಕುಟುಂಬಗಳ ರಕ್ಷಣೆಗೆ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಆರಂಭವಾಗಿದೆ. ಇದರಡಿಯಲ್ಲಿ ಡಿಜಿಟಲ್ ಆರೋಗ್ಯ ಐಡಿಯನ್ನು ನೀಡಲಾಗುತ್ತದೆ. ಪ್ರತಿಯೊಬ್ಬ ನಾಗರಿಕನ ಆರೋಗ್ಯ ದಾಖಲೆಯನ್ನು ಡಿಜಿಟಲ್ ಮೂಲಕ ರಕ್ಷಿಸಲಾಗುತ್ತದೆ ಎಂದು ತಿಳಿಸಿದರು.
ಆರೋಗ್ಯ ಸೇತು ಆ್ಯಪ್ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸಾಕಷ್ಟು ಸಹಾಯ ಮಾಡಿದೆ. ಉಚಿತ ಲಸಿಕೆ ಅಭಿಯಾನದಡಿಯಲ್ಲಿ ಭಾರತವು ಇಂದು ಸುಮಾರು 90 ಕೋಟಿ ಡೋಸ್ ವ್ಯಾಕ್ಸಿನೇಷನ್ ಪೂರೈಸಿದೆ. ಇದರ ಹಿಂದೆ ಕೋ-ವಿನ್ ಆ್ಯಪ್ ನ ಪಾತ್ರ ಕೂಡ ದೊಡ್ಡದಿದೆ. ಈ ಸೌಲಭ್ಯ ರಿಮೋಟ್ ಸ್ಥಳಗಳಲ್ಲಿ ವಾಸವಾಗಿರುವ ದೇಶವಾಸಿಗಳು ಆಸ್ಪತ್ರೆಗಳ ವೈದ್ಯರೊಂದಿಗೆ ಮನೆಯಲ್ಲಿಯೇ ಕುಳಿತು ಸಂಪರ್ಕಿಸಲು ಸಹಾಯ ಆಗಿದೆ ಎಂದರು.










