ವಿಧಾನಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು.

66
firstsuddi

ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಅಭ್ಯರ್ಥಿಗಳಾಗಿ ಎಂ. ನಾಗರಾಜ್ ಯಾದವ್ ಹಾಗೂ ಕೆ. ಅಬ್ದುಲ್ ಜಬ್ಬಾರ್ ಅವರು ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಯು.ಟಿ.ಖಾದರ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಇನ್ನೂ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾಗಿ ಲಕ್ಷ್ಮಣ ಸಂಗಪ್ಪ ಸವದಿ, ಎಸ್. ಕೇಶವ ಪ್ರಸಾದ್, ಛಲವಾದಿ ನಾರಾಯಣಸ್ವಾಮಿ ಹಾಗೂ ಹೇಮಲತಾ ನಾಯಕ ಅವರು ಇಂದು ನಾಮಪತ್ರ ಸಲ್ಲಿಸಿದರು.

ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇತ್ತು. ಕೊಪ್ಪಳದಿಂದ ರಸ್ತೆ ಮಾರ್ಗವಾಗಿ ಬರುತ್ತಿದ್ದ ಹೇಮಲತಾ ಅವರನ್ನು ತಡವಾಗಬಹುದು ಎಂಬ ಕಾರಣಕ್ಕೆ ತುಮಕೂರಿನಲ್ಲಿ ಹೆಲಿಕಾಪ್ಟರ್ ನಲ್ಲಿ ಏರ್ ಲಿಫ್ಟ್ ಮಾಡಿದರು. ಹಾಗಾಗಿ, ಮಧ್ಯಾಹ್ನ 2.20 ರ ಸುಮಾರಿಗೆ ವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಉಮೇಶ್ ಕತ್ತಿ, ಆರ್. ಅಶೋಕ, ಸಿ.ಸಿ.ಪಾಟೀಲ್, ಗೋಪಾಲಯ್ಯ, ಶಾಸಕ ಸಂಜೀವ್ ಮಠಂದೂರು, ಸಚಿವ ಶಿವರಾಂ ಹೆಬ್ಬಾರ್, ಶಾಸಕ ನಾರಾಯಣ ಸ್ವಾಮಿ, ಪರಿಷತ್ ಮಾಜಿ ಸದಸ್ಯ ಪ್ರಾಣೇಶ್, ನಿರ್ಮಲಕುಮಾರ್ ಸುರಾನ, ಶಾಸಕ ರವಿ ಸುಬ್ರಹ್ಮಣ್ಯ ಹಾಗೂ ಪಕ್ಷದ ಮುಖಂಡ ಚಂದ್ರಶೇಖರ್ ಪಾಟೀಲ್ ಉಪಸ್ಥಿತರಿದ್ದರು.