ನವದೆಹಲಿ : ವಿರೋಧ ಪಕ್ಷಗಳ ವಿರೋಧದ ನಡುವೆಯೂ ‘ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ, 2020’ ಅನ್ನು ರಾಜ್ಯಸಭೆಯಲ್ಲಿ ಮಂಡಿಸಲಾಯಿತು.
ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಲು ಮುಂದಾದ ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಅವರಿಗೆ ವಿರೋಧ ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಆದರೂ ಸುಮ್ಮನಾಗದ ಕಿರೋಡಿ ಲಾಲ್ ಮೀನಾ ಏಕರೂಪ ನಾಗರಿಕ ಸಂಹಿತೆಯನ್ನು ಸಿದ್ಧಪಡಿಸಲು ಸಮಿತಿಗೆ ಅವಕಾಶ ನೀಡುವ ವಿವಾದಾತ್ಮಕ ಖಾಸಗಿ ಸದಸ್ಯರ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದರು.
ಈ ಮಸೂದೆ ಮಂಡನೆ ವಿರೋಧಿಸಿ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ತೃಣಮೂಲ ಕಾಂಗ್ರೆಸ್ ಸದಸ್ಯರು ಪ್ರತಿಭಟಿಸಿದರು. ಇದು ದೇಶದಲ್ಲಿ ಪ್ರಚಲಿತದಲ್ಲಿರುವ ಸಾಮಾಜಿಕ ರಚನೆ ಮತ್ತು ವಿವಿಧತೆಯಲ್ಲಿ ಏಕತೆಯನ್ನು ನಾಶಗೊಳಿಸುತ್ತದೆ ಎಂದು ಹೇಳಿದರು.
ಈ ಹಿಂದೆ, ಮಸೂದೆಯನ್ನು ಪರಿಚಯಿಸಲು ಪಟ್ಟಿ ಮಾಡಲಾಗಿದ್ದರೂ, ಅದನ್ನು ಮೇಲ್ಮನೆಯಲ್ಲಿ ಮಂಡಿಸಿರಲಿಲ್ಲ.










