ಶಿವಮೊಗ್ಗ : ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಕಳೆದೆರಡು ತಿಂಗಳಿನಿಂದ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಇದೀಗ ಸೋಂಕಿನ ಪ್ರಮಾಣ ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಅನ್ ಲಾಕ್ ಘೋಷಿಸಿದ್ದು, ಪ್ರವಾಸಿ ತಾಣಗಳನ್ನು ತೆರೆಯಲು ಅವಕಾಶ ಕಲ್ಪಿಸಿದೆ. ಹೀಗಾಗಿ ಜಿಲ್ಲೆಯ ಸಾಗರ ತಾಲ್ಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಇಂದಿನಿಂದ ಮುಕ್ತ ಅವಕಾಶ ನೀಡಲಾಗಿದ್ದು, ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಮಯಾವಕಾಶ ನಿಗದಿಪಡಿಸಲಾಗಿದೆ.
ಇನ್ನೂ ಜೋಗ ಜಲಪಾತ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.










