ಬೆಂಗಳೂರು : ಆರ್ ಟಿ ನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಸೋಮವಾರದಿಂದ ರಾಜ್ಯದಲ್ಲಿ ಶಾಲೆಗಳು ಆರಂಭವಾಗಲಿದ್ದು, ಶಾಲೆ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಲೆ ಆರಂಭದ ದಿನ ಬೆಂಗಳೂರಿನ ಕೆಲ ಶಾಲೆಗಳಿಗೆ ಭೇಟಿ ಕೊಡುತ್ತೇನೆ. ನನ್ನ ಜೊತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕೂಡ ಬರುತ್ತಾರೆ. ಶಿಕ್ಷಕರಿಗೆ ವ್ಯಾಕ್ಸಿನೇಷನ್ ಆಗಿದೆ, ಶಾಲೆಗಳನ್ನು ಸ್ಯಾನಿಟೈಜ್ ಮಾಡಲಾಗಿದೆ. ಅಂತರ ಕಾಯ್ದುಕೊಂಡೇ ತರಗತಿಗಳನ್ನು ನಡೆಸಲಾಗುತ್ತದೆ, ದಿನ ಬಿಟ್ಟು ದಿನದಂತೆ ಬ್ಯಾಚ್ ಗಳನ್ನು ಮಾಡಿ ಶಾಲೆ ನಡೆಸಲಾಗುತ್ತದೆ. ಎಲ್ಲ ಪೋಷಕರು ಸಹ ಲಸಿಕೆ ಪಡೆಯಬೇಕು. ಪೋಷಕರ ಸಮ್ಮತಿಯನ್ನ ಪಡೆದೇ ಮಕ್ಕಳು ಶಾಲೆಗೆ ಬರಬೇಕು, ಯಾವುದೇ ಆತಂಕ ಇಲ್ಲದೆ ವಿದ್ಯಾರ್ಥಿಗಳು ಶಾಲೆಗೆ ಬರಬಹುದು ಎಂದರು.
ಇಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಳ್ಳಾರಿ ಮಾರ್ಗವಾಗಿ ಆಲಮಟ್ಟಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಿಎಂ ಜೊತೆ ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಕೂಡ ಪ್ರಯಾಣಿಸಿದ್ದಾರೆ. ಆಲಮಟ್ಟಿಯ ಕೃಷ್ಣ ನದಿಗೆ ಬಾಗಿನ ಅರ್ಪಿಸಲಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಕೊರೊನಾ ನಿರ್ವಹಣೆ ಮತ್ತು ನೆರೆಹಾನಿ ಕುರಿತು ಸಭೆ ನಡೆಸಲಿದ್ದಾರೆ.










