ಬೆಂಗಳೂರು : ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ನೀಡಿ ಆದೇಶ ನೀಡಿದೆ.
ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಮಾಡಾಳ್ ಬಂಧನಕ್ಕೆ ಬಲೆ ಬೀಸಿದ್ದ ಲೋಕಾಯುಕ್ತ ಪೊಲೀಸರು ನಿನ್ನೆ ಸಂಜೆ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧಿಸಿದ್ದರು. ಇಂದು ವಿರೂಪಾಕ್ಷಪ್ಪ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಈ ವೇಳೆ ವಿರೂಪಾಕ್ಷಪ್ಪರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡಬೇಕು ಎಂದು ಲೋಕಾಯುಕ್ತ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದಕ್ಕೆ ಮಾಡಾಳ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಈಗಾಗಲೇ ಸಾಕಷ್ಟು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಜೊತೆಗೆ ಮಾಡಾಳ್ ವಿರೂಪಾಕ್ಷಪ್ಪ ಅನಾರೋಗ್ಯ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದರು.
ಇಬ್ಬರ ವಾದವನ್ನು ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರದವರೆಗೆ ಅಂದರೆ 5 ದಿನ ಲೋಕಾಯುಕ್ತ ಕಸ್ಟಡಿಗೆ ನೀಡಿದೆ.










