ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು…

55
firstsuddi

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನ್ಯಾ. ಜಯಂತ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ. ಐದು ಲಕ್ಷ ರೂ. ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚನೆ ನೀಡಲಾಗಿದೆ. ಮೂರು ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು, ತನಿಖಾಧಿಕಾರಿ ವಶಕ್ಕೆ ಪಾಸ್ ಪೋರ್ಟ್ ನೀಡಬೇಕು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮಕ್ಕೆ ಭೇಟಿ ನೀಡುವಂತಿಲ್ಲ, ಸಾಕ್ಷ್ಯಾಧಾರ ನಾಶಪಡಿಸುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

ಏನಿದು ಪ್ರಕರಣ?
ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‍ಡಿಎಲ್) ಅಧ್ಯಕ್ಷರಾಗಿದ್ದಾಗ ಟೆಂಡರ್ ನೀಡಲು 80 ಲಕ್ಷ ರೂಪಾಯಿಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇದರ ಮುಂದುವರಿದ ಭಾಗವಾಗಿ ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ 40 ಲಕ್ಷ ರೂಪಾಯಿಗಳನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಲಂಚ ರೂಪದಲ್ಲಿ ಸ್ವೀಕರಿಸುತ್ತಿದ್ದ ಹಣ ವಶಕ್ಕೆ ಪಡೆದು ಪ್ರಶಾಂತ್ ಅವರನ್ನು ಬಂಧಿಸಿದ್ದರು. ಇದಾದ ಬಳಿಕ ವಿರೂಪಾಕ್ಷಪ್ಪ ಮತ್ತವರ ಮಗನ ಬೆಂಗಳೂರಿನ ಕಚೇರಿಗಳು ಹಾಗೂ ಮನೆ ಮತ್ತು ಚನ್ನಗಿರಿಯ ಮನೆಗಳ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಕೋಟ್ಯಂತರ ರೂಪಾಯಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದರು.

ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಿದ್ದರು. ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಲೆಮರೆಸಿಕೊಂಡಿದ್ದರು. ನಂತರ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನಂತರ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇದೀಗ ಜಾಮೀನು ನೀಡಿದ್ದು, ಮಾಡಾಳ್ ಗೆ ರಿಲೀಫ್ ಸಿಕ್ಕಿದಂತಾಗಿದೆ.