ಶಿವಕುಮಾರ ಶ್ರೀಗಳ ಜನ್ಮದಿನೋತ್ಸವ : 116 ಮಕ್ಕಳಿಗೆ ಸ್ವಾಮೀಜಿ ಹೆಸರು ನಾಮಕರಣ…

48
firstsuddi

ತುಮಕೂರು : ಇಂದು ನಡೆದಾಡುವ ದೇವರು ಶಿವಕುಮಾರ ಶ್ರೀಗಳ 116 ನೇ ಜನ್ಮದಿನೋತ್ಸವ ಹಿನ್ನೆಲೆಯಲ್ಲಿ ಸಿದ್ದಲಿಂಗ ಸ್ವಾಮೀಜಿಯವರು ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ಮಠಾಧೀಶರ ಸಮ್ಮುಖದಲ್ಲಿ ಮಂತ್ರಘೋಷಗಳಿಂದ ಪೂಜೆ ನಡೆಯಿತು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗಿಯಾದರು.

ಜಯಂತಿ ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಪ್ರತಿಮೆ ಇಟ್ಟು ಮೆರವಣಿಗೆ ಮಾಡಲಾಯಿತು. ಬೆಳಗ್ಗೆ 11 ಗಂಟೆಗೆ ಶ್ರೀ ಗೋಸಲಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಿತು. ನೀತಿ ಸಂಹಿತೆ ಇರುವುದರಿಂದ ರಾಜಕಾರಣಿಗಳಿಗೆ ಆಹ್ವಾನ ನೀಡಿಲ್ಲ. ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀ, ಸುತ್ತೂರು ಮಠದ ಶ್ರೀ ಗಳ ಸಾನಿಧ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸೇರಿದಂತೆ ಭಕ್ತರು ಭಾಗಿಯಾದರು. ಶಿವೈಕ್ಯ ಶಿವಕುಮಾರ ಶ್ರೀಗಳ 116 ನೇ ಜನ್ಮದಿನೋತ್ಸವ ಹಿನ್ನೆಲೆಯಲ್ಲಿ 116 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ ಮಾಡಲಾಯಿತು.

ಶಿವಕುಮಾರ ಸ್ವಾಮೀಜಿಗಳ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಟ್ವೀಟ್ ಮಾಡಿ ಶ್ರೀಗಳನ್ನು ಸ್ಮರಿಸಿದ್ದಾರೆ.

“ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟು ಹಬ್ಬದ ಈ ವಿಶೇಷ ಸಂದರ್ಭದಲ್ಲಿ ಅವರಿಗೆ ನನ್ನ ನಮನ. ಅವರು ಲಕ್ಷಾಂತರ ಜನರ ಮೇಲೆ ಅಪಾರ ಪ್ರಭಾವ ಬೀರಿದ್ದಾರೆ. ಸಮಾಜಸೇವೆಗೆ ಉನ್ನತ ಸ್ಥಾನ ಮತ್ತು ಜನರನ್ನು ಸಶಕ್ತಗೊಳಿಸುವುದಕ್ಕೆ ಅವರು ಪ್ರಾಮುಖ್ಯ ನೀಡಿದ್ದರು. ಅವರ ಕನಸುಗಳನ್ನು ಪೂರೈಸಲು ನಾವು ಸದಾ ಶ್ರಮಿಸುತ್ತೇವೆ.” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.