ಶೀಘ್ರಗತಿಯಲ್ಲಿ ಬಿಬಿಎಮ್‍ಪಿ ಚುನಾವಣೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ.

47

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಶೀಘ್ರಗತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಮಾಧ್ಯಮಗಾರರೊಂದಿಗೆ ಮಾತನಾಡಿರುವ ಅವರು, ಬಿಬಿಎಂಪಿಗೆ ಚುನಾವಣೆ ನಡೆಸುವ ಮನಸ್ಸಿಲ್ಲದ ಸರ್ಕಾರ ಗ್ರೇಟರ್ ಬೆಂಗಳೂರು ರಚಿಸುತ್ತೇವೆ, ಇನ್ನಷ್ಟು ಪ್ರದೇಶಗಳನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದು ಹೇಳುತ್ತಿದೆ. ಇರುವ ನಗರವನ್ನೇ ಸುಧಾರಣೆ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಹೊಸ ಪ್ರದೇಶಗಳ ಅಭಿವೃದ್ಧಿ ಹೇಗೆ ಸಾಧ್ಯ? ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಮಾಡಿದಂತಾಗುತ್ತದೆ. ಕೆಂಪೇಗೌಡರನ್ನು ನಂಬುವ ಜನರ ಮನಸ್ಸಿಗೆ ನೋವಾಗುತ್ತದೆ ಎಂದು ಹೇಳಿದರು. ಈಗ 198 ವಾರ್ಡ್‍ಗಳಿಗೆ ಚುನಾವಣೆ ನಡೆಸಿದರೆ ಸಾಕು ಎಂದು ಹೇಳಿದರು.
ರಸ್ತೆ ಮೇಲ್ಭಾಗದಲ್ಲೇ ಸುರಂಗ ನಿರ್ಮಾಣವಾಗುತ್ತಿರುವಾಗ 150 ಅಡಿ ಕೆಳಗೆ ಸುರಂಗ ಕೊರೆಯಲು ಹೊರಟಿದ್ದಾರೆ. ಡಿ.ಕೆ ಶಿವಕುಮಾರ್ ಅವರ ಹೇಳಿಕೆಗಳಿಂದ ಜನರು ರೊಚ್ಚಿಗೆದ್ದಿದ್ದಾರೆ. ಬೆಂಗಳೂರಿಗೆ ಬೆಂಗಳೂರಿನವರೇ ಆದ ಸಚಿವರಿಲ್ಲ. ಬೇರೆ ಜಿಲ್ಲೆಯ ಸಚಿವರಿಗೆ ನಗರದ ಬಗ್ಗೆ ಆಸಕ್ತಿ ಇಲ್ಲ. ಸರ್ಕಾರದಿಂದಾಗಿ ಬೆಂಗಳೂರು ಅನಾಥವಾಗಿದೆ ಎಂದು ಅಶೋಕ್ ಅವರು ದೂರಿದರು. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್ ಮಾಡುತ್ತೇವೆ ಎಂದು ಡಿಕೆಶಿ ಹೇಳಿದ್ದರು. ಈಗ ಅವರೇ ಬೆಂಗಳೂರನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದರ ವಿರುದ್ಧ ಹೋರಾಟ ಮಾಡಲು ಸಭೆ ನಡೆಸಲಾಗಿದೆ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನ ಜವಾಬ್ದಾರಿ ವಹಿಸಿಲ್ಲ. ಡಿಸಿಎಂ ಡಿ.ಕೆ ಶಿವಕುಮಾರ್ ದೇವರ ಮೊರೆ ಹೋಗಿ, ನಗರವನ್ನು ದೇವರಿಗೆ ಅರ್ಪಣೆ ಮಾಡಿದ್ದಾರೆ. ರಾಜಧಾನಿಯನ್ನು ದೇವರೇ ಕಾಪಾಡಬೇಕಿದೆ. ಬೆಂಗಳೂರಿನ ಉಸ್ತುವಾರಿಯನ್ನು ಯಾರಾದರೂ ವಹಿಸಿಕೊಳ್ಳಲಿ. ಆದರೆ ಬೆಂಗಳೂರನ್ನು ಉದ್ಧಾರ ಮಾಡುವವರು, ನಗರದ ಬಗ್ಗೆ ಜ್ಞಾನ ಇರುವವರು ಸಚಿವರಾಗಲಿ ಎಂದು ಹೇಳಿದರು. ಬೆಂಗಳೂರು ಡಾನ್, ಮಾಫಿಯಾಗಳ ಕೈಗೆ ಸಿಲುಕಿದೆ. ಕೊಲೆ, ಸುಲಿಗೆ, ಅತ್ಯಾಚಾರ ಮೊದಲಾದ ಅಪರಾಧಿ ಚಟುವಟಿಕೆಗಳು ರಾಜ್ಯದಲ್ಲಿ ನಡೆಯುತ್ತಿವೆ. ಜನರೇ ಸ್ವತಃ ಆತ್ಮರಕ್ಷಣೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ. ಕಾಂಗ್ರೆಸ್ ನಾಯಕರು ಇನ್ನೂ ಗ್ಯಾರಂಟಿಗಳ ಗುಂಗಿನಲ್ಲೇ ಇದ್ದಾರೆ. ಈ ಸರ್ಕಾರ ತೊಲಗಿದರೆ ಸಾಕು ಎಂದು ಜನರು ಹೇಳುತ್ತಿದ್ದಾರೆ ಎಂದು ಅಶೋಕ್ ಹೇಳಿದರು.