ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯ ಚುನಾವಣಾ ಆಯೋಗ ನೀಡಿದ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಜಾನ್ ವೇಳೆ ಮೊಬೈಲ್ ಅಂಗಡಿಯಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣವನ್ನು ಖಂಡಿಸಿ ಬುಧವಾರ ನಗರತ್ ಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸಂಸದ ತೇಜಸ್ವಿ ಸೂರ್ಯ ಅವರು, ಮತೀಯ ಭಾವನೆಗಳನ್ನು ಕೆರಳಿಸುವಂತಹ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಚಿಕ್ಕಪೇಟೆ ನಿವಾಸಿ ಸಾವಿತ್ರಿಹಳ್ಳಿ ಎಂಬುವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆಯೋಗದ ಸೂಚನೆಯ ಹಿನ್ನೆಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರತ್ ಪೇಟೆ ಘಟನೆಯ ವರದಿಯನ್ನು ತುಷಾರ್ ಗಿರಿನಾಥ್ ನಿನ್ನೆ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರು. ವರದಿ ಸಲ್ಲಿಸಿದ ಬಳಿಕ ರಾಜ್ಯ ಚುನಾವಣಾ ಆಯೋಗದಿಂದ ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು ಮಾಡಲು ಸೂಚನೆ ನೀಡಲಾಗಿದೆ. ಸೂಚನೆ ಸಿಕ್ಕ ಬಳಿಕ ಚಿಕ್ಕಪೇಟೆ ಚುನಾವಣಾಧಿಕಾರಿ ದೂರು ಕೊಟ್ಟಿದ್ದಾರೆ.










