ಸಕಲ ಸರ್ಕಾರಿ ಗೌರವದೊಂದಿಗೆ ಅಪಘಾತದಲ್ಲಿ ಮೃತಪಟ್ಟ ಬಿಎಸ್ಎಫ್ ಯೋಧನ ಅಂತ್ಯಕ್ರಿಯೆ…

74
firstsuddi

ಬೆಳಗಾವಿ : ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಬಿಎಸ್ಎಫ್ ಯೋಧ ಸೂರಜ್ ಸುತಾರ್ ಅವರ ಅಂತ್ಯಕ್ರಿಯೆ ಇಂದು ಅವರ ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಕಳೆದ 2012ರಲ್ಲಿ ಸೂರಜ್ ಬಿಎಸ್ಎಫ್ ಗೆ ಸೇರಿದ್ದರು. ಪಶ್ಚಿಮ ಬಂಗಾಳದ ಪಂಜಿಪಾಡಾದಲ್ಲಿ ಸೋಮವಾರ ಬೆಳಗ್ಗೆ ಪತ್ನಿಯೊಂದಿಗೆ ಸೇವಾ ಸ್ಥಳಕ್ಕೆ ಹೋಗುತ್ತಿದ್ದಾಗ ರಿಕ್ಷಾದಿಂದ ಕೆಳಗಿಳಿಯುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಯೋಧ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಇಂದು ಯೋಧನ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಯೋಧನ ಪಾರ್ಥಿವ ಶರೀರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಹಲವು ಗಣ್ಯರು ಮೃತ ಯೋಧ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು. ಬಳಿಕ ಗ್ರಾಮದ ಸ್ಮಶಾನ ಭೂಮಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.