ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಸಿಐಡಿ ಅಧಿಕಾರಿಗಳ ಭೇಟಿ.

32

ಬೆಂಗಳೂರು: ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿ.ಟಿ ರವಿ ಅವರು ಅಶ್ಲೀಲ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ನಿನ್ನೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನೆಗೆ ಭೇಟಿ ನೀಡಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ ವೇಳೆ ಸಚಿವರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವಾಚ್ಯ ಪದ ಬಳಿಸಿದ್ದರು. ಈ ಕುರಿತು ಸಿಐಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿತ್ತು. ಪ್ರಕರಣದ ತನಿಖಾಧಿಕಾರಿಯಾಗಿರುವ ಸಿಐಡಿಯ ಡಿವೈಎಸ್‍ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ, ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸರ್ಕಾರಿ ನಿವಾಸಕ್ಕೆ ತೆರಳಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ತನಿಖಾಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಪ್ರಕರಣವನ್ನು ನಾನು ಪ್ರತಿಷ್ಠೆಯಾಗಿ ಸ್ವೀಕರಿಸುವುದಿಲ್ಲ. ಇದು ನನ್ನ ಸ್ವಾಭಿಮಾನದ ಪ್ರಶ್ನೆಯಾಗಿದೆ ಹಾಗೂ ಒಬ್ಬ ಹೆಣ್ಣುಮಗಳಿಗೆ ಆಗಿರುವ ಅವಮಾನದ ಪ್ರಶ್ನೆ. ಪ್ರಕರಣದ ವಿಚಾರಣೆ ಈಗಿನ್ನೂ ಶುರುವಾಗಿದೆ. ಹಿನ್ನಡೆ ಅಥವಾ ಮುನ್ನಡೆಯ ಬಗ್ಗೆ ಚಿಂತಿಸುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಏನು ಆಗಬೇಕಿದೆಯೋ ಅದು ಆಗುತ್ತದೆ. ಈ ವಿಚಾರದಲ್ಲಿ ಒಬ್ಬ ಹೆಣ್ಣುಮಗಳಾಗಿ ಎಲ್ಲರೂ ನನ್ನೊಂದಿಗೆ ನಿಲ್ಲಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದರು.