ಸಾಲ ತೀರಿಸದ ಜನರ ಮೇಲೆ ನಿಯಮ ಬಾಹಿರ ದಬ್ಬಾಳಿಕೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ.

30

ಬೆಂಗಳೂರು: ಮೈಕ್ರೋ ಫೈನಾನ್ಸ್‍ಗಳ ವಿರುದ್ಧ ಆರೋಪ ಕೇಳಿಬಂದಿದ್ದು, ಸಿಎಂ ಸಿದ್ದರಾಮಯ್ಯ ಸಾಲ ತೀರಿಸದ ಜನರ ಮೇಲೆ ನಿಯಮ ಬಾಹಿರ ದಬ್ಬಾಳಿಕೆ ಮಾಡವುದು ಸಹಿಸಲ್ಲ ಎಂದು ಹೇಳಿದ್ದಾರೆ. ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ, ಅಂತಹ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ, ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ. ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು. ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ಎಂದು ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶದಿಂದ ಪ್ರಶ್ನಿಸಿದರು.