ನವದೆಹಲಿ: ಸಿಎಂ ಬಿಕ್ಕಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಸಿದ್ಧರಾಮಯ್ಯ ಅವರು ಮತ್ತೊಮ್ಮೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.
ನಿನ್ನೆ ದಿನಪೂರ್ತಿ ಡಿಕೆಶಿ ಜೊತೆ ಮಾತುಕತೆ ನಡೆಸಿದರೂ ಯಾವುದೇ ಕಾರಣಕ್ಕೂ ತಮ್ಮ ಬೇಡಿಕೆಯಿಂದ ಹಿಂದಕ್ಕೆ ಸರಿದಿರಲಿಲ್ಲ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಮನವೊಲಿಕೆಯ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಒಪ್ಪಿಗೆ ನೀಡಿದ್ದಾರೆ.
ಆರಂಭದ ಎರಡೂವರೆ ವರ್ಷ ಸಿದ್ದರಾಮಯ್ಯ ಮತ್ತು ಉಳಿದ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಿ ಎಂದು ಮಲ್ಲಿಕಾರ್ಜುನ ಖರ್ಗೆಯವರು ಸೂಚಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.
ಕರ್ನಾಟಕದ ಮಾಜಿ ಕಾಂಗ್ರೆಸ್ ಉಸ್ತುವಾರಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನಿವಾಸದಲ್ಲಿ ಇಂದು ಬೆಳಗ್ಗೆ ಉಪಾಹಾರ ಕೂಟ ಏರ್ಪಡಿಸಲಾಗಿದ್ದು ಅದರಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಸಹ ಭಾಗವಹಿಸಲಿದ್ದಾರೆ.
ಇಂದು ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಸಿಎಂ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಸಿದ್ದರಾಮಯ್ಯನವರು ಇದೇ ಶನಿವಾರ ಮೇ 20ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೇ 20 ಶನಿವಾರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ನಡೆಯಲಿದೆ.










