ಬೆಂಗಳೂರು : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ್ಞಾನಜ್ಯೋತಿ ಸಭಾಂಗಣದಲ್ಲಿ ಒಂಭತ್ತು ನೂತನ ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಎಲ್ಲ ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ
ಬರೆಯುವ ಕೇಂದ್ರಗಳು. ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಈ ರೀತಿಯ ವಿಶ್ವವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ ಎಂದು ತಿಳಿಸಿದರು.
ದೇಶದಲ್ಲಿ ಉನ್ನತ ಶಿಕ್ಷಣ ಅಂದರೆ ಐಐಟಿ. ಅದಕ್ಕೆ ಸಿಇಟಿ ಮೂಲಕ ಆಯ್ಕೆ ಆಗಬೇಕು. ನಮ್ಮ ಮಕ್ಕಳೂ ಐಐಟಿ ಮಾದರಿಯಲ್ಲಿ ಶಿಕ್ಷಣ ಪಡೆಯಬೇಕು ಎಂದು ಕೆಐಟಿ ಸ್ಥಾಪನೆ ಮಾಡಲಾಗಿದೆ. ಮುಂದಿನ 5 ವರ್ಷಗಳಲ್ಲಿ ಎಲ್ಲಾ ಸಂಸ್ಥೆಗಳು ಐಐಟಿ ಮಾದರಿಯಲ್ಲಿ ಇರಲಿವೆ ಎಂದು ಹೇಳಿದರು.
ವಿದ್ಯಾರ್ಥಿಗಳು ನಾಡಿನ ಭವಿಷ್ಯ. ಈಗ 21ನೇ ಶತಮಾನ ಜ್ಞಾನದ ಶತಮಾನ. ಮುಂದಿನ ದಿನಗಳಲ್ಲಿ ಭಾರತ ವಿಶ್ವ ಗುರುವಾಗಲಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಪಾಕಿಸ್ತಾನದ ಪ್ರಜೆಗಳು ಮೋದಿಯಂಥ ಪ್ರಧಾನಿ ಬೇಕು ಅಂತ ಹೇಳುತ್ತಿದ್ದಾರೆ. ಚೀನಾ ಕೂಡ ಭಾರತ ಕೊರೊನಾ ನಿಯಂತ್ರಣ ಮಾಡಿದ್ದನ್ನು ಮೆಚ್ಚಿಕೊಂಡಿದೆ ಎಂದರು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವ ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಉಪಸ್ಥಿತರಿದ್ದರು.
ಒಂಬತ್ತು ನೂತನ ವಿವಿಗಳು : ಕೊಡಗು ವಿವಿ, ಕೊಪ್ಪಳ ವಿವಿ, ಬಾಗಲಕೋಟೆ ವಿವಿ, ಚಾಮರಾಜನಗರ ವಿವಿ, ಹಾಸನ ವಿವಿ, ಮಂಡ್ಯ ವಿವಿ, ಬೀದರ್ ವಿವಿ, ಹಾವೇರಿ ವಿವಿ, ರಾಯಚೂರು ವಿವಿ.










