ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ- ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು…

50
firstsuddi

ಬೆಳ್ತಂಗಡಿ: 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ.

ಈ ಸಂಬಂಧ ಪುತ್ತೂರು ನಗರಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಿದ್ದಾರೆ.

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಅಲ್ಲದೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊಹಮ್ಮದ್ ರಿಯಾಝ್ ದೂರಿನಲ್ಲಿ ಒತ್ತಾಯಿಸಿದ್ದಾರೆ. ಈ ಸಂಬಂಧ ಹರೀಶ್ ಪೂಂಜಾ ಮಾತನಾಡಿರುವ ವೀಡಿಯೊ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದಾರೆ.

ಇದೇ ತಿಂಗಳ 22ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಹರೀಶ್ ಪೂಂಜಾ, 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ತುಳುವಿನಲ್ಲಿ ಹೇಳಿದ್ದರು.

24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ವೋಟ್ ಕೇಳಿದ್ದೀರ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದಿದ್ದರು. ಇದೀಗ ಬಿಜೆಪಿ ಶಾಸಕನ ಆರೋಪ ವಿವಾದಕ್ಕೆ ಕಾರಣವಾಗಿದೆ.