ಸಿಬಿಐ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಡಿ.ಕೆ.ಶಿವಕುಮಾರ್

60
firstsuddi

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣ ರದ್ದು ಕೋರಿ ಡಿಕೆಶಿ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಹೆಚ್ಚುವರಿ ಕಾಲಾವಕಾಶ ಬೇಕು ಎಂದು ನ್ಯಾಯಾಲಯಕ್ಕೆ ಸಿಬಿಐ ಮನವಿ ಮಾಡಿದೆ.

ಡಿಕೆಶಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಸ್. ಸುನಿಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ತನಿಖೆ ಪೂರ್ಣಗೊಂಡಿದೆಯೇ, ಆರೋಪ ಪಟ್ಟಿ ಸಲ್ಲಿಸಲಾಗಿದೆಯೇ ಎಂದು ನ್ಯಾಯಪೀಠ ಸಿಬಿಐ ಪರ ವಕೀಲರನ್ನು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ವಕೀಲರು ಇನ್ನೂ ತನಿಖೆ ನಡೆಯುತ್ತಿದೆ ಎಂದು ವಿವರಿಸಿದರು. ಸಿಬಿಐ ಪರ ವಕೀಲರ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ವಿಚಾರಣೆಯನ್ನು ದಸರಾ ರಜೆಯ ನಂತರಕ್ಕೆ ಮುಂದೂಡಿದೆ.

ಏನಿದು ಪ್ರಕರಣ? : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಅಕ್ಟೋಬರ್ 2020ರಲ್ಲಿ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣವನ್ನು ಸಿಬಿಐ ದಾಖಲು ಮಾಡಿತ್ತು. ಡಿಕೆಶಿ ಹಾಗೂ ಕುಟುಂಬದ ಸದಸ್ಯರು 74.93 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬುವುದು ಸಿಬಿಐ ಮಾಡಿರುವ ಆರೋಪವಾಗಿದೆ.