ಬೆಂಗಳೂರು : ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್ ನ ಮಹತ್ವದ ತೀರ್ಪು ಹೊರಬಿದ್ದಿದೆ. ತರಗತಿಗಳಲ್ಲಿ ಹಿಜಾಬ್ ಧರಿಸುವ ಪರವಾಗಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಬೆನ್ನಲ್ಲೇ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಸುರೇಶ್ಕುಮಾರ್, ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯಿಸಿ ಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಹಿಜಬ್ ಬಗ್ಗೆ ಕೋರ್ಟ್ ಕೊಟ್ಟಿರುವ ತೀರ್ಮಾನವನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ಗೊಂದಲ ನಿವಾರಣೆ ಆಗುವ ದಿಕ್ಕಿನಲ್ಲಿ ಎಲ್ಲರೂ ಪ್ರಯತ್ನಿಸಬೇಕು. ಮಕ್ಶಳು ಶಾಲೆಗೆ ಹೋಗುವ ಬಗ್ಗೆ ಬುದ್ದಿ ವಾದ ಹೇಳಬೇಕು. ಶಿಕ್ಷಣ ಹಾಳಾಗಬಾರದು. ಕೋರ್ಟಿನ ತೀರ್ಪಿಗೆ ಬದ್ದವಾಗಬೇಕು. ಮಕ್ಕಳಿಗೆ ಶಿಕ್ಷಣ ವ್ಯವಸ್ಥೆ ತೊಂದರೆ ಆಗಿದೆ ಎಂದು ಹೇಳುವವರು ಈಗ ಯೋಚನೆ ಮಾಡಬೇಕು ಎಂದಿದ್ದಾರೆ.
ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ವಿಚಾರವಾಗಿ ನಾವು ಕರ್ನಾಟಕ ಹೈಕೋರ್ಟ್ ನ ಐತಿಹಾಸಿಕ ತೀರ್ಪನ್ನು ಸ್ವಾಗತಿಸುತ್ತೇವೆ. ಈ ನೆಲ, ನೆಲದ ಕಾನೂನು ಅಂತಿಮ ಎಂದು ಸಚಿವ ನಾಗೇಶ್ ಟ್ವೀಟ್ ಮಾಡಿದ್ದಾರೆ.
ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಟ್ವೀಟ್ ಮಾಡಿ, ಸಮವಸ್ತ್ರ ವಿಷಯ ಕುರಿತ ಕರ್ನಾಟಕ ಉಚ್ಛ ನ್ಯಾಯಾಲಯದ ತೀರ್ಪು ಅತ್ಯಂತ ಸ್ವಾಗತಾರ್ಹ. ಸಮಸ್ಯೆ ಇಲ್ಲಿಗೆ ಕೊನೆಯಾಗಿ, ಎಲ್ಲಾ ಮಕ್ಕಳು ಶಾಲೆ – ಕಾಲೇಜುಗಳಲ್ಲಿ ಶಿಕ್ಷಣ ಪಡೆಯುವುದಕ್ಕೆ ಗಮನ ಹರಿಸುವಂತೆ ನಾವೆಲ್ಲ ಸಹಕಾರ ನೀಡಬೇಕಿದೆ ಎಂದು ತಿಳಿಸಿದ್ದಾರೆ.
ಕೋರ್ಟ್ ತೀರ್ಪು ನೀಡಿದ ನಂತರ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು, ರಾಜ್ಯ ಹೈಕೋರ್ಟ್ ಸಮವಸ್ತ್ರದ ವಿಚಾರದಲ್ಲಿ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಇದನ್ನು ಎಲ್ಲ ವಿದ್ಯಾರ್ಥಿಗಳೂ ಗೌರವಿಸಿ, ಪಾಲಿಸಬೇಕು ಯಾವುದೇ ಧರ್ಮದ ಮಕ್ಕಳಾದರೂ ಶಿಕ್ಷಣಕ್ಕೆ ಆದ್ಯ ಗಮನ ಕೊಟ್ಟು, ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವುದರ ಕಡೆಗೆ ಗಮನ ಕೊಡಬೇಕು. ಯಾವುದೇ ಧಾರ್ಮಿಕ ವಸ್ತ್ರಗಳತ್ತ ಅನಗತ್ಯ ಆದ್ಯತೆ ನೀಡುವ ಮೂಲಕ ಬದುಕಿನ ಸದವಕಾಶಗಳನ್ನು ವ್ಯರ್ಥ ಮಾಡಿಕೊಳ್ಳಬಾರದು. ಈ ಮೂಲಕ ಎಲ್ಲರೂ ಸೌಹಾರ್ದದಿಂದ ಮತ್ತು ಪರಸ್ಪರ ಗೌರವದಿಂದ ಬದುಕಬೇಕು. ಹಿಂದೆಂದೂ ಶಾಲಾ-ಕಾಲೇಜುಗಳಲ್ಲಿ ಇಂತಹ ವಿವಾದ ಕಂಡುಬಂದಿರಲಿಲ್ಲ. ನ್ಯಾಯಾಲಯವು ಈ ವಿಚಾರವನ್ನು ಆಳವಾಗಿ ಅಧ್ಯಯನ ಮಾಡಿ, ಸರಿಯಾದ ತೀರ್ಪು ನೀಡಿದೆ ಎಂದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್ ಮಾಡಿ, ಹಿಜಬ್ ವಿವಾದ ವಿಚಾರದಲ್ಲಿ ರಾಜ್ಯದ ಉಚ್ಚ ನ್ಯಾಯಾಲಯ ತೀರ್ಪು ನೀಡಿದ್ದು, ಸರ್ಕಾರದ ನಿಲುವನ್ನು ಸಮರ್ಥಿಸಿ ಸಮವಸ್ತ್ರ ಕಡ್ಡಾಯ ಆದೇಶವನ್ನು ಎತ್ತಿ ಹಿಡಿದಿದೆ. ನ್ಯಾಯಾಲಯದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಎಲ್ಲರೂ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.










