ಬೆಂಗಳೂರು: ರಾಜ್ಯದ ಸಂಕಷ್ಟದಲ್ಲಿರುವ ತಂಬಾಕು ಬೆಳೆಗಾರರನ್ನು ಬೆಂಬಲಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಜೆಡಿಎಸ್ ಕರ್ನಾಟಕ ಘಟಕ ಇಂದು ಧನ್ಯವಾದ ಸಲ್ಲಿಸಿದೆ. ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ ಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆಯಲಾಗಿರುವ ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೆ ತಮ್ಮ ಉತ್ಪನ್ನಗಳ ಮಾರಾಟಕ್ಕೆ ಅನುಮತಿ ನೀಡಿದ್ದಕ್ಕಾಗಿ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ. ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದ ಅವರು, 2024ರ ಡಿ.2ರಂದು ದೆಹಲಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ನೇತೃತ್ವದ ನಿಯೋಗವು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ನಂತರ ಡಿ. 21ರಂದು ವಾಣಿಜ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಿರ್ಣಾಯಕ ಸಭೆ ನಡೆಸಲಾಯಿತು ಎಂದು ತಿಳಿಸಿದ್ದಾರೆ. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಕ್ಸ್‍ನಲ್ಲಿನ ಪೋಸ್ಟ್ ನಲ್ಲಿ, 2024ರ ಮೇ, ಜೂನ್ ಮತ್ತು ಜುಲೈನಲ್ಲಿ ಭಾರಿ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ ಎಫ್‍ಸಿವಿ ತಂಬಾಕು ಬೆಳೆಗಾರರ ರಕ್ಷಣೆಗೆ ಬಂದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಜಿ ಮತ್ತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಜಿ ಅವರಿಗೆ ವಿಶೇಷ ಧನ್ಯವಾದಗಳು ಎಂದು ಹೇಳಿದ್ದಾರೆ.










